ಶುಕ್ರವಾರ, ನವೆಂಬರ್ 15, 2019
22 °C
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಆದ್ಯತೆ ನೀಡಬೇಕು. ಶಾಶ್ವತ ಬ್ಯಾರಿಕೇಡ್‌ಗಳ ನಿರ್ಮಾಣ, ರಸ್ತೆ ಗುಂಡಿಗಳ ಮುಚ್ಚುವಿಕೆ, ಬೀದಿದೀಪಗಳನ್ನು ಸರಿಪಡಿಸುವ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ನಾಗರಿಕರ ಹಿತದೃಷ್ಟಿಯಿಂದ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ರಸ್ತೆಗಳನ್ನು ಸುರಕ್ಷಿತವಾಗಿಡಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ವಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸರಕು ಸಾಗಣೆ ವಾಹನಗಳಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರನ್ನು ಕರೆದುಕೊಂಡು ಹೋಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಹೇಳಿದರು.

‘ರಾಷ್ಟ್ರೀಯ ಹೆದ್ದಾರಿ ಸೇರುವ ಸ್ಥಳಗಳಲ್ಲಿ ಶಾಶ್ವತ ಬ್ಯಾರಿಕೆಡ್‌ಗಳನ್ನು ಅಳವಡಿಸಬೇಕು. ಹೆದ್ದಾರಿಗಳಲ್ಲಿ ಆಂಬುಲೆನ್ಸ್‌ಗಳನ್ನು ಸಜ್ಜುಗೊಳಿಸಿಟ್ಟುಕೊಂಡಿರಬೇಕು. ಅಗತ್ಯವಿದ್ದಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೂಡಲೇ ಟೆಂಡರ್ ಕರೆದು ಕಾಮಗಾರಿಯನ್ನು ಆರಂಭಿಸಬೇಕು’ ಎಂದು ತಿಳಿಸಿದರು.

‘ಪುರಸಭೆ ಮತ್ತು ನಗರ ಸಭೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ನಗರಗಳಲ್ಲಿ ಬೀದಿದೀಪಗಳು, ಸಿಗ್ನಲ್ ದೀಪಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಗೂ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಕಡ್ಡಾಯವಾಗಿ ಬಸ್ ಬೇ ಗಳನ್ನು ನಿರ್ಮಿಸಲು ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಲಹೆ ಪಡೆದು ಕಾಮಗಾರಿಯನ್ನು ಪ್ರಾರಂಭಿಸಬೇಕು’ ಎಂದು ಸೂಚಿಸಿದರು.

‘ರಸ್ತೆಯ ಬದಿ ಹಾಗೂ ಸಿಗ್ನಲ್‌ಗಳಲ್ಲಿ ಅಳವಡಿಸಿರುವ ಸಿಸಿ ಟಿ.ವಿ ಕ್ಯಾಮೆರಾಗಳನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಬೇಕು. ಬಾಗೇಪಲ್ಲಿ, ಶಿಡ್ಲಘಟ್ಟ, ಗೌರಿಬಿದನೂರು ತಾಲ್ಲೂಕುಗಳಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಈ ಕೂಡಲೇ ಕ್ರಮ ಜರುಗಿಸಬೇಕು. ವಿಳಂಬವಾಗುತ್ತಿರುವ ಗೌರಿಬಿದನೂರು–ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ- 234 ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ಹೇಳಿದರು.

‘ಪರಿಸರ ಸಂರಕ್ಷಣೆಗಾಗಿ ತೋಟಗಾರಿಕೆ ಇಲಾಖೆಯಿಂದ ಸಸಿಗಳನ್ನು ಪಡೆದು ರಸ್ತೆಯ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ರಾಷ್ಟ್ರೀಯ ಹೆದ್ದಾರಿಗಳು, ಜಿಲ್ಲೆಯ ಪ್ರಮುಖ ರಸ್ತೆಗಳು ಸೇರಿದಂತೆ ಎಲ್ಲಾ ಕಡೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲು ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷ್ ಬಾಬು, ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀಕಾಂತ್ ಬಿ.ನಾಲವಾರ, ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿ ಬಸವರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ನಿಖಲ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)