ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕೋವಿಡ್‌ ನಿಯಂತ್ರಿಸಲು ಮಾರ್ಷಲ್‌ ನೇಮಕ

ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಎಚ್ಚರಿಕೆ
Last Updated 27 ಅಕ್ಟೋಬರ್ 2020, 16:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಭೌತಿಕ ಅಂತರ ಮತ್ತು ಸ್ವಚ್ಚತೆ ಕಾಪಾಡುವುದರ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಮಾರ್ಷಲ್ ಸೈನಿಕರನ್ನು ನೇಮಕ ಮಾಡಿದೆ.

ನಗರದಲ್ಲಿ ಮಂಗಳವಾರ ಮಾರ್ಷಲ್ ಸೈನಿಕರ ದಳಕ್ಕೆ ಮತ್ತು ಕೋವಿಡ್-19 ಸೋಂಕು ತಡೆಗಟ್ಟುವ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಲತಾ, ‘ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮಾರಕ ಕಾಯಿಲೆ ಹರಡುತ್ತಲೇ ಇದ್ದರೂ ಸಾರ್ವಜನಿಕರು ಮಾಸ್ಕ್ ಧರಿಸದೆ, ಭೌತಿಕ ಅಂತರ ಕಾಪಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡುಬರುತ್ತಿದೆ. ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವ ಪಾಲಿಸದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ’ ಎಂದು ಹೇಳಿದರು.

‘ಕೋವಿಡ್‌ ಸಮಪರ್ಕವಾಗಿ ನಿಯಂತ್ರಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರ, ನಗರ, ತಾಲ್ಲೂಕು ಕೇಂದ್ರಗಳಲ್ಲಿ ಮಾರ್ಷಲ್ ಸೈನಿಕರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಸ್ವಚ್ಛತಾ ಕ್ಯಾಪ್ಟನ್‍ಗಳೇ ಮಾರ್ಷಲ್‍ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಕೋವಿಡ್‌ ಮಾರ್ಗಸೂಚಿ ಪಾಲಿಸದವರಿಗೆ ಮಾರ್ಷಲ್‌ಗಳು ದಂಡ ವಿಧಿಸಲಿದ್ದಾರೆ’ ಎಂದು ತಿಳಿಸಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿಯೊಬ್ಬರು 6 ಅಡಿ ಅಂತರವನ್ನು ಪಾಲಿಸಬೇಕು. ಈ ನಿಯಮ ಉಲ್ಲಂಘಿಸುವವರಿಗೆ ನಗರ ಪ್ರದೇಶಗಳಲ್ಲಿ ₹250 ಮತ್ತು ಗ್ರಾಮೀಣ ಭಾಗಗಳಲ್ಲಿ ₹100 ದಂಡ ವಿಧಿಸಲಾಗುವುದು’ ಎಂದರು.

‘ಮಾಸ್ಕ್ ಕಡ್ಡಾಯವಾಗಿ ಹಾಕಿದರೆ ಕೋವಿಡ್ ಮಹಾಮಾರಿಯನ್ನು ನಿಯಂತ್ರಣ ಮಾಡಲು ಸಾಧ್ಯ. ಕಳೆದ 8 ತಿಂಗಳ ಹಿಂದೆ ಲಾಕ್‍ಡೌನ್ ಸಮಯದಲ್ಲಿ ಕೋವಿಡ್ ನಿಯಂತ್ರಿಸಲು ಜಿಲ್ಲೆಯ ಜನರು ಸಹಕರಿಸಿದ್ದರು. ಮುಂದೆಯೂ ಸಹ ಇದೇ ರೀತಿ ಸಹಕಾರ ನೀಡಬೇಕು. ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣವಾಗಿ ತಡೆಗಟ್ಟಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ. ನೂರಕ್ಕೆ ನೂರರಷ್ಟು ಕೋವಿಡ್‌ ಹತೋಟಿಗೆ ತರವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಮಾರುಕಟ್ಟೆ, ಬಸ್‌ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಹೇಳಿದರು.

‘ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ತಪ್ಪದೆ ಪಾಲಿಸಬೇಕು. ಮಾರ್ಗಸೂಚಿಗಳನ್ನು ಉಲ್ಲಘಿಸಿದರೆ ದಂಡ ವಿಧಿಸಲಾಗುವುದು. ಇದೀಗ ಪೊಲೀಸ್ ಸಹಾಯವಾಣಿ ಸಂಖ್ಯೆ 100ರ ಬದಲಿಗೆ 112 ಆಗಿ ಬದಲಾವಣೆ ಮಾಡಲಾಗಿದೆ. ಗಲಭೆ, ಅಪಘಾತ, ಅಹಿತಕರ ಘಟನೆಗಳ ಸಂದರ್ಭದಲ್ಲಿ ನಾಗರಿಕರು ಸಹಾಯವಾಣಿಗೆ ಕರೆ ಮಾಡಬೇಕು’ ಎಂದು ತಿಳಿಸಿದರು.

ನಗರಸಭೆ ಆಯುಕ್ತ ಲೋಹಿತ್ ಕುಮಾರ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಯಶಶ್ವಿನಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT