ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ ಭಾಗ್ಯನಗರವಾಗಲಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲು ಜಿಲ್ಲಾಡಳಿತಕ್ಕೆ ಒತ್ತಾಯ
Last Updated 19 ಸೆಪ್ಟೆಂಬರ್ 2022, 4:38 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪ್ರಗತಿಪರ, ರೈತ, ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಿಂದ ಬಾಗೇಪಲ್ಲಿ ಭಾಗ್ಯನಗರ ಎಂದು ನಾಮಕರಣ ಮಾಡಬೇಕೆಂಬ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ. ಕೂಡಲೇ ಸರ್ಕಾರಕ್ಕೆ ಸಾಧಕ-ಬಾಧಕಗಳ ಬಗ್ಗೆ ಜಿಲ್ಲಾಡಳಿತ ಕೂಡಲೇ ಪ್ರಸ್ತಾವ ಸಲ್ಲಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಭಾಗ್ಯನಗರದ ಪ್ರಸ್ತಾವ ಸಲ್ಲಿಸಲು ಇಲಾಖೆ ಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಸಭೆ ಮಾಡಿ ಮಾತನಾಡಿದರು.

ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಪಕ್ಷಾತೀತವಾಗಿ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗಿದೆ. ಸರ್ಕಾರ ಸಾಧಕ-ಬಾಧಕ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ತಿಳಿಸಿದೆ. ಕನ್ನಡಪರ, ಪ್ರಗತಿಪರ, ರೈತಪರ, ತಾಲ್ಲೂಕು ಇಲಾಖೆಗಳ ಅಧಿಕಾರಿಗಳ ಸಭೆ ಮಾಡಲಾಗಿದೆ. ಎಲ್ಲರ ಒಟ್ಟಾರೆ ಅಭಿಪ್ರಾಯದಂತೆ ಭಾಗ್ಯನಗರ ಮಾಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪುರಸಭೆ ವ್ಯಾಪ್ತಿಯ 1ನೇ ವಾರ್ಡ್‌ನ ಜಾಗದಲ್ಲಿ ಕನ್ನಡ ಭವನ ನಿರ್ಮಿಸಲು ನಿವೇಶನದ ಬಗ್ಗೆ ಪರಿಶೀಲನೆ ಮಾಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹಮದ್ ಮಾತನಾಡಿ, ಅನೇಕ ವರ್ಷಗಳಿಂದ ಹೋರಾಟ ನಡೆದಿದೆ ಪಲ್ಲಿ ಎನ್ನುವ ಇರುವ ಗ್ರಾಮಗಳ ಹೆಸರು ಬದಲಾಯಿಸಬೇಕು. ಆಂಧ್ರಪ್ರದೇಶದ ಗಡಿಯಲ್ಲಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಆಡುವ ಭಾಷೆ ತೆಲುಗು ಆದರೂ, ಕನ್ನಡ ವ್ಯವಹಾರಿಕ ಭಾಷೆ ಆಗಿದೆ. ಸರ್ಕಾರದ ಮೇಲೆ ನಿರಂತರ ಒತ್ತಡ ಹಾಕಲು ಹೋರಾಟಗಾರರು ಪ್ರಯತ್ನಿಸಬೇಕು ಎಂದರು.

ತಹಶೀಲ್ದಾರ್ ವೈ.ರವಿ, ತಾಲ್ಲೂಕು ಪಂಚಾಯಿತಿ ಇಒ ಎಚ್.ಎನ್.ಮಂಜುನಾಥಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ಅಧ್ಯಕ್ಷೆ ರೇಷ್ಮಾಬಾನು ನಯಾಜ್, ಉಪಾಧ್ಯಕ್ಷ ಎ.ಶ್ರೀನಿವಾಸ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎ.ಜಿ.ಸುಧಾಕರ್, ತಾಲ್ಲೂಕು ಉಪಾಧ್ಯಕ್ಷ ಡಾ.ಚಿನ್ನಕೈವಾರಮಯ್ಯ, ಕನ್ನಡಪರ ಸಂಘಟನೆಗಳ ಮುಖಂಡರಾದ ಬಾಬಾಜಾನ್, ರವೀಂದ್ರ, ಬಿಟಿಸಿ ಸೀನಾ, ಜಬೀವುಲ್ಲಾ, ಕೆ.ಎನ್.ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT