ಮಂಗಳವಾರ, ಫೆಬ್ರವರಿ 25, 2020
19 °C
ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ: ನೀಲಗಿರಿ ತೆರವಿಗೆ ತಿಂಗಳ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಾದ್ಯಂತ ಬೆಳೆದಿರುವ ನೀಲಗಿರಿ ಮರಗಳನ್ನು ಒಂದು ತಿಂಗಳ ಒಳಗೆ ತೆರವುಗೊಳಿಸಬೇಕು. ತೆರವುಗೊಳಿಸದೆ ನಿರ್ಲಕ್ಷಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು (ಇಒ) ಒಳಗೊಂಡ ನೀಲಗಿರಿ ಮರಗಳ ತೆರವು ಕಾರ್ಯಾಚರಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ನೀಲಗಿರಿ ಮರಗಳು ನೀರಿನ ಸಂರಕ್ಷಣೆಗೆ ಮಾರಕವಾಗಿದ್ದು, ಪರಿಣಾಮ ಜಿಲ್ಲೆಯು ಬರದಿಂದ ತತ್ತರಿಸಿದೆ. ಈಗಾಗಲೇ ನೀರಿನ ಅಭಾವದಿಂದಾಗಿ ರೈತರು ಕಂಗಲಾಗಿದ್ದಾರೆ, ಈ ನಡುವೆ ನೀಲಗಿರಿ ತೋಪುಗಳು ಜಿಲ್ಲೆಯಲ್ಲಿ ಹೆಚ್ಚಾಗಿ, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವಂತೆ ಮಾಡುತ್ತಿವೆ. ಹೀಗಾಗಿ, ನೀಲಗಿರಿ ಮರಗಳಿಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರವು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ’ ಎಂದು ಹೇಳಿದರು.

‘ಎಲ್ಲ ತಹಶೀಲ್ದಾರ್, ಇಒಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಭೆ ನಡೆಸಿ ನೀಲಗಿರಿ ಮರಗಳು ಇರುವ ಸರ್ಕಾರಿ ಹಾಗೂ ಖಾಸಗಿ ಒಡೆತನದ ಭೂಮಿಗಳ ಪಟ್ಟಿ ಮಾಡಿ, ಒಂದು ತಿಂಗಳ ಒಳಗೆ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು. ಮರಗಳನ್ನು ತೆರವುಗೊಳಿಸಲು ಒಪ್ಪದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ಖಾಸಗಿ ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡದಿದ್ದರೆ, ಪಹಣಿಯಲ್ಲಿ ಸರ್ಕಾರಿ ಬೀಳು ಜಮೀನು ಎಂದು ಪರಿಗಣಿಸಲಾಗುತ್ತದೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸಿ. ರೈತರು ಸ್ವಯಂಕೃತವಾಗಿ ನೀಲಗಿರಿ ಮರಗಳ ಕಟಾವಿಗೆ ಮುಂದಾಗಬೇಕು. ನೀಲಗಿರಿ ಮರಗಳನ್ನು ಬುಡ ಸಮೇತ ತೆರವುಗೊಳಿಸಬೇಕು. ಅಲ್ಲದೇ ತೆರವುಗೊಳಿಸಿದ ಜಾಗದಲ್ಲಿ ಇತರೆ ಸಸಿಗಳನ್ನು ನೆಡಲು ಸಾಮಾಜಿಕ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು