ಸೋಮವಾರ, ಜನವರಿ 20, 2020
18 °C
ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಸಾಮಾಜಿಕ ಹೋರಾಟಗಾರ ಎ.ಟಿ.ಕೃಷ್ಣನ್‌ ಆಕ್ರೋಶ

ಜ.2 ರಂದು ಚಳವಳಿ ಸಂದೇಶ ರವಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ‘ಕೇಂದ್ರ ಸರ್ಕಾರದ ಅರಾಜಕತೆ ವಿರುದ್ಧ ಹಾಗೂ ಭಾರತ ಸಂವಿಧಾನವನ್ನು ಉಳಿಸಿಕೊಳ್ಳಲು ಜನವರಿ 2 ರಂದು ಎರಡನೇ ಸ್ವಾತಂತ್ರ್ಯ ಹೋರಾಟ ಚಳವಳಿ ಮಾಡಿ ಎಂದು ದೇಶಕ್ಕೆ ಸಂದೇಶ ರವಾನೆ ಮಾಡಲಾಗುತ್ತದೆ’ ಎಂದು ಸಾಮಾಜಿಕ ಹೋರಾಟಗಾರ ಎ.ಟಿ.ಕೃಷ್ಣನ್‌ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇವತ್ತು ದೇಶದ ಜಿಡಿಪಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಇನ್ನೊಂದೆಡೆ ಅರಾಜಕತೆ ಸೃಷ್ಟಿಯಾಗುತ್ತಿದೆ. ಇದರಿಂದ ನಿರುದ್ಯೋಗ, ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ಈ ಎಲ್ಲಾ ಸಮಸ್ಯೆಗಳನ್ನು ಎದುರಿಸಲಾಗದ ಸರ್ಕಾರಗಳು ಜನರ ಗಮನವನ್ನು ಬೆರೆಡೆ ಸೆಳೆಯುತ್ತಿರುವುದು ಖಂಡನೀಯ. ದೇಶದಲ್ಲಿ ಮೊದಲು ಅಭಿವೃದ್ಧಿಗೆ ಆಧ್ಯತೆ ನೀಡಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಅರಾಜಕತೆಗೆ ಹೆಚ್ಚು ಒತ್ತು ನೀಡುತ್ತಿದೆ’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರದ ವೈಖರಿ ನೋಡಿದರೆ ನಾವು ನಮ್ಮ ಸ್ವಾತಂತ್ರ್ಯವನ್ನು ಪುನಃ ಕಳೆದುಕೊಂಡಿದ್ದೇವೆ ಎನಿಸುತ್ತದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಸಂವಿಧಾನ ಉಳಿಯುವುದೇ ಎಂಬ ಅನುಮಾನ ಮೂಡುತ್ತಿದೆ. ಆದ್ದರಿಂದ, ಸಂವಿಧಾನ ಉಳಿಸಲು ಡಿ.27 ರಂದು ಜಿಲ್ಲೆಯ ಎಲ್ಲಾ ದಲಿತ ಸಂಘರ್ಷ ಸಮಿತಿ, ಪ್ರಗತಿ ಪರ ಸಂಘಟನೆಗಳು, ರೈತ ಹೋರಾಟ ಸಂಘಗಳ ಸಭೆ ಕರೆಯಲಾಗಿದೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಹಾಗೂ ಪೌರತ್ವ (ತಿದ್ದುಪಡಿ) ಕಾಯ್ದೆ ಅಲ್ಪ ಸಂಖ್ಯಾತರ ಹಕ್ಕುಗಳಿಗೆ ಚ್ಯುತಿ ತರುವ ವಿಚಾರವಾಗಿದೆ ಹಾಗೂ ಸರ್ಕಾರದ ಅಜೆಂಡಾ ನೋಡಿದರೆ ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಇದೇ ರೀತಿ ಕಿರುಕುಳ ನೀಡಬಹುದು. ಎನ್‌ಆರ್‌ಸಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ದ ಹೋರಾಟ ಮಾಡುತ್ತಿರುವ ಜಾಮಿಯಾ ಮತ್ತು ಅಲೀಗಡ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು