ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಳಿಕೆ ಹಿಂಪಡೆಯುವಂತೆ ಸಂಸದರಿಗೆ ಆಗ್ರಹ

ದೊಡ್ಡಬಳ್ಳಾಪುರ ನಗರಕ್ಕೆ ಶೇ 50:50ರ ಅನುಪಾತದಲ್ಲಿ ನೀರು ಹರಿಸುವ ಬಚ್ಚೇಗೌಡರ ಹೇಳಿಕೆಗೆ ಮುಖಂಡ ನಂದಿ ಆಂಜಿನಪ್ಪ ಖಂಡನೆ
Last Updated 16 ಅಕ್ಟೋಬರ್ 2019, 18:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ದೊಡ್ಡಬಳ್ಳಾಪುರ ನಗರಕ್ಕೆ ಶೇ 50:50ರ ಅನುಪಾತದಲ್ಲಿ ನೀರು ಹರಿಸುವ ಹೇಳಿಕೆಯನ್ನು ಸಂಸದ ಬಿ.ಎನ್.ಬಚ್ಚೇಗೌಡ ಅವರು ವಾಪಸ್ ಪಡೆಯಬೇಕು. ಇಲ್ಲವಾದರೆ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ನಂದಿ ಆಂಜಿನಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಜಕ್ಕಲಮಡುಗು ನೀರು ನಗರದ ಜನತೆಯ ಹಕ್ಕು. ಈ ಹಕ್ಕನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಚಿಕ್ಕಬಳ್ಳಾಪುರ ನಗರ ಜಿಲ್ಲಾ ಕೇಂದ್ರ ಸ್ಥಾನವಾಗಿದ್ದು ಅತಿ ಹೆಚ್ಚು ನೀರಿನ ಅವಶ್ಯಕತೆ ಇದೆ. ಸಾವಿರಾರು ಕುಟುಂಬಗಳು ಉದ್ಯೋಗಕ್ಕಾಗಿ ಚಿಕ್ಕಬಳ್ಳಾಪುರ ನಗರಕ್ಕೆ ವಲಸೆ ಬಂದು ವಾಸವಾಗಿದ್ದಾರೆ’ ಎಂದು ತಿಳಿಸಿದ್ದಾರೆ.

‘ನಗರದ ಜನಸಂಖ್ಯೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಹೀಗಿರುವಾಗ ಜಕ್ಕಲಮಡುಗು ನೀರನ್ನು ದೊಡ್ಡಬಳ್ಳಾಪುರ ನಗರಕ್ಕೆ ಕೇಳುವುದು ನ್ಯಾಯವೆ? ಬಚ್ಚೇಗೌಡರು ಈ ಬಗ್ಗೆ ಯೋಚಿಸಬೇಕಾಗಿದೆ. ದೊಡ್ಡಬಳ್ಳಾಪುರ ನಗರ ಕೇವಲ ತಾಲ್ಲೂಕು ಕೇಂದ್ರವಾಗಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆ ಬರಗಾಲದಿಂದ ತತ್ತರಿಸಿ ಹೋಗಿದ್ದು, ಕುಡಿಯುವ ನೀರಿನ ಸಮಸ್ಯೆಯಿಂದ ಜನ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಸದರು ಶೇ 50:50ರ ಅನುಪಾತದಲ್ಲಿ ದೊಡ್ಡಬಳ್ಳಾಪುರಕ್ಕೆ ನೀರು ಹರಿಸುತ್ತೇವೆ ಎನ್ನುವುದು ಸಲ್ಲದು’ ಎಂದು ಹೇಳಿದ್ದಾರೆ.

‘ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ಜನತೆಗೆ ಕುಡಿಯಲು ಸಹ ನೀರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಬಹುದು. ಇಂತಹ ಸಮಯದಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಮುಗಿಸಿ ಆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸಲು ಸಂಸದರು ಮತ್ತು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ’ ಎಂದಿದ್ದಾರೆ.

‘ಈಗಾಗಲೇ ಬೆಂಗಳೂರು ನಗರಕ್ಕೆ ಪೂರೈಕೆಯಾಗುತ್ತಿರುವ ಕಾವೇರಿ ನೀರನ್ನು ತರುವ ನಿಟ್ಟಿನಲ್ಲಿ ಮತ್ತು ಆಂಧ್ರಪ್ರದೇಶದ ಹಿಂದೂಪುರದವರೆಗೂ ಬಂದಿರುವ ಕೃಷ್ಣಾ ನದಿ ನೀರನ್ನು ಜಿಲ್ಲೆಗೆ ತರುವ ಪ್ರಯತ್ನವನ್ನು ಸಂಸದರು ಮಾಡಲಿ. ಅದು ಬಿಟ್ಟು ಚಿಕ್ಕಬಳ್ಳಾಪುರ ಜನತೆ ಭಾವನೆಗಳನ್ನು ಕೆರಳಿಸುವ ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ಹಂಚಿಕೆಯಾಗಿರುವಂತೆ ಶೇ 68:32ರ ಅನುಪಾತದಲ್ಲೇ ನೀರು ಹರಿಸಬೇಕು. ಇಲ್ಲದಿದ್ದರೆ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಆಂಜನಪ್ಪ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT