ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ವಿರುದ್ಧ ನಳೀನ್ ವಾಗ್ದಾಳಿ

Last Updated 30 ನವೆಂಬರ್ 2020, 11:29 IST
ಅಕ್ಷರ ಗಾತ್ರ

ಚಿಂತಾಮಣಿ: ‘ದೇಶದಲ್ಲಿ ನಡೆಸುತ್ತಿರುವ ತುಷ್ಟೀಕರಣ ನೀತಿಯ ರಾಜಕಾರಣದಿಂದ ಕಾಂಗ್ರೆಸ್ ಅವನತಿ ಕಾಣುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ನಗರದ ಕೆ.ಎಂ.ಡಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಜೆಪಿಯಿಂದ ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳ ಬಲವರ್ಧನೆಗಾಗಿ ಅನುದಾನ ನೀಡುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಪ್ರತಿ ಪಂಚಾಯಿತಿಯಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ ಎಂದರು.

ದೇಶದಲ್ಲಿ 75 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಗಾಂಧಿ ಹೆಸರು ಹೇಳಿಕೊಂಡು ಜನತೆಗೆ ಟೋಪಿ ಹಾಕಿದೆ. ಅವರ ಪಕ್ಷವು ಕಾರ್ಯಕರ್ತರನ್ನು ಕಡೆಗಣಿಸಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ದೇಶ ಹಾಗೂ ಪಕ್ಷಕ್ಕೆ ಗೌರವ ತಂದುಕೊಟ್ಟ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿಗೆ ಹೋಲಿಸಿದರೆ ಕಾಂಗ್ರೆಸ್ ಸಾಧನೆ ಶೂನ್ಯ ಎಂದು ಹೇಳಿದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಕಳೆದ ಬಾರಿ ಜಿಲ್ಲೆಯ 228 ಗ್ರಾಮ ಪಂಚಾಯಿತಿಗಳ ಪೈಕಿ 148 ಸ್ಥಾನಗಳಲ್ಲಿ ಬೆಂಬಲಿಗರು ಜಯಗಳಿಸಿದ್ದರು. ಈ ಬಾರಿ ಕೇಂದ್ರ ಮತ್ತು ರಾಜ್ಯದಲ್ಲಿ ಪಕ್ಷದ ಸರ್ಕಾರವಿದೆ. ಹೀಗಾಗಿ ಈ ಬಾರಿ ಶೇಕಡ 90ರಷ್ಟು ಸ್ಥಾನಗಳಲ್ಲಿ ಗೆಲುವು ಪಡೆಯಲು ಶ್ರಮಿಸಬೇಕು ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಬೇಕು. ಪಂಚಾಯಿತಿ ಮಟ್ಟದಲ್ಲಿ ಪಕ್ಷ ಬೆಳೆಸಬೇಕು. ದೇಶದ ಕಟ್ಟಕಡೆಯ ಮನುಷ್ಯನಿಗೂ ಜನಧನ್ ಖಾತೆ, ವಿದ್ಯುತ್, ಆರೋಗ್ಯ, ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯ ಒದಗಿಸಲು ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ಬಿಜೆಪಿ ರಾಜ್ಯ ಘಟಕದ ಶೋಭಾ ಕರಂದ್ಲಾಜೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಶಾಸಕರಾದ ವೈ.ಎ. ನಾರಾಯಣಸ್ವಾಮಿ, ಚಿದಾನಂದಗೌಡ, ಮುಖಂಡರಾದ ಸತ್ಯನಾರಾಯಣ ಮಹೇಶ್, ಅರುಣಬಾಬು, ನಾ. ಶಂಕರ್, ವೆಂಕಟಶಿವಾರೆಡ್ಡಿ, ಶಿವಾರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT