ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್ ಗೊಂದಲ ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯ: ಸಚಿವ ಡಾ.ಎಂ.ಸಿ.ಸುಧಾಕರ್

Published 23 ಜೂನ್ 2024, 16:05 IST
Last Updated 23 ಜೂನ್ 2024, 16:05 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ನೀಟ್ ಹಾಗೂ ಪಿಜಿ ಪರೀಕ್ಷೆಯನ್ನು ಮುಂದೂಡಿರುವುದು ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯ’ ಎಂದು ವೈದ್ಯಕೀಯ ಹಾಗೂ ಆರೋಗ್ಯ ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಆರೋಪಿಸಿದರು.

ಭಾನುವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ನೀಟ್, ಪಿಜಿ ಪರೀಕ್ಷೆ ಭಾನುವಾರ ನಿಗದಿಪಡಿಸಲಾಗಿತ್ತು. ಕೇಂದ್ರ ಸರ್ಕಾರ ವಿನಾಃ ಕಾರಣ ಪರೀಕ್ಷೆಯನ್ನು ರದ್ದುಪಡಿಸಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸಿದೆ. ಪರೀಕ್ಷೆ ತಯಾರಿ ಮಾಡಿದವರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಇದು ಕೇಂದ್ರ ಸರ್ಕಾರದ ವೈಫಲ್ಯ’ ಎಂದರು.

‘ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಫಲಿತಾಂಶವು ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಘಾತ ತರಿಸಿದೆ. ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.

ರಕ್ಷಾರಾಮಯ್ಯ ಮಾತನಾಡಿ, ‘ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ ಇದೆ ಎಂದು ಈ ಲೋಕಸಭಾ ಚುನಾವಣೆಯಲ್ಲಿ ಸಾಬೀತುಪಡಿಸಿದೆ. ಚುನಾವಣೆಯಲ್ಲಿ ನನಗೆ ಹೆಚ್ಚು ಮತಗಳಿಸಲು ಶ್ರಮಿಸಿದ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಅಭಾರಿಯಾಗಿದ್ದೇನೆ’ ಎಂದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯರಿಗೆ ಹೆಚ್ಚು ಮತ ನೀಡಲು ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶ್ರಮಿಸಿದ್ದಾರೆ. ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುತ್ತೇನೆ. ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಜನರಿಗೆ ತಲುಪಿಸುತ್ತೇನೆ ಎಂದರು.

ಮಾಜಿ ಶಾಸಕ ಎಚ್.ಎನ್.ಶಿವಶಂಕರರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ, ಗುಡಿಬಂಡೆ ತಾಲ್ಲೂಕು ಅಧ್ಯಕ್ಷ ಆದಿರೆಡ್ಡಿ, ಅಭಿಷೇಕ್‍ ಸುಬ್ಬಾರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT