ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆಬಾವಿ ಮರುಪೂರಣಕ್ಕೆ ಸೂಚನೆ

Last Updated 1 ಡಿಸೆಂಬರ್ 2020, 3:19 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು ಕೊಳವೆಬಾವಿಗಳನ್ನು ಮರುಪೂರಣ ಮಾಡಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಮಂಜುನಾಥ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮಳೆಯಿಂದಾಗಿ ಗ್ರಾಮಗಳಲ್ಲಿ ರಸ್ತೆಗಳು ಹದಗೆಟ್ಟಿರುತ್ತವೆ. ಚರಂಡಿಗಳು ಹೂಳು ತುಂಬಿರುತ್ತವೆ. ರಸ್ತೆ, ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಚರಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ತಾಣಗಳಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ ಎಂದು ಎಚ್ಚರಿಸಿದರು.

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ಉತ್ತಮ ಮಳೆಯಾಗಿದ್ದರೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದು ಸರಿಯಲ್ಲ. ಕೊಳವೆಬಾವಿಗಳ ಮರುಪೂರಣ ಮಾಡುವ ಕಡೆಗೆ ಗಮನಹರಿಸಬೇಕು. ಮಳೆಯಿಂದಾಗಿ ಅಂತರ್ಜಲ ವೃದ್ಧಿಯಾಗಿದ್ದು ಕೊಳವೆಬಾವಿಗಳಿಂದ ನೀರು ದೊರೆಯುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಾಲ್ಲುಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು. ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ಒದಗಿಸಬೇಕು ಹಾಗೂ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ, ಎಲ್ಲ ಜನಪ್ರತಿನಿಧಿಗಳ ಅನುದಾನ ತಮ್ಮ ಇಲಾಖೆಗೆ ಬರುತ್ತದೆ. ಯಾವುದೇ ಅನುದಾನ ವಾಪಸ್ ಹೋಗಬಾರದು. ಕಾನೂನಿನಂತೆ ಕ್ರಿಯಾಯೋಜನೆ ರೂಪಿಸಿ ಸಮಯಕ್ಕೆ ಸರಿಯಾಗಿ ಅನುದಾನವನ್ನು ಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.

ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಲ್ಲಿ ನರೇಗಾ ಅಡಿಯಲ್ಲಿ ಬರುವ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು. ಮೂರು ಇಲಾಖೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ಅನುಕೂಲವಾಗುತ್ತದೆ. ಜಲಾಮೃತ ಯೋಜನೆ ಕುರಿತು ಗ್ರಾಮಾಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲ್ಲೂಕು ಪಂಚಾಯಿತಿಗೂ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಅಂಗವಿಕಲರು ಸರ್ಟಿಫಿಕೆಟ್ ಪಡೆಯಲು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ಹೋಗಬೇಕಿದೆ. ಜಿಲ್ಲೆಯ ವೈದ್ಯಾಧಿಕಾರಿ ತಿಂಗಳಿಗೆ 2 ಬಾರಿ ಚಿಂತಾಮಣಿ ತಾಲ್ಲೂಕು ಆಸ್ಪತ್ರೆಗೆ ಆಗಮಿಸಿ ಇಲ್ಲಿಯೇ ಸರ್ಟಿಫಿಕೆಟ್ ನೀಡುವ ವ್ಯವಸ್ಥೆ ಮಾಡಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಗೆ ಸೂಚಿಸಲಾಯಿತು.

ಉಪಾಧ್ಯಕ್ಷ ನಾರಾಯಣಸ್ವಾಮಿ, ವಿವಿಧ ಇಲಾಖೆಯ ತಾಲ್ಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT