ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗೆ ತ್ವರಿತ ಸೌಲಭ್ಯಕ್ಕೆ ಸೂಚನೆ

Last Updated 23 ನವೆಂಬರ್ 2020, 4:34 IST
ಅಕ್ಷರ ಗಾತ್ರ

ಗುಡಿಬಂಡೆ: ‘ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಗಮಿಸುವ ಸಾರ್ವಜನಿಕರನ್ನು ವಿನಾಕಾರಣ ಅಲೆದಾಡಿಸದೇ ತ್ವರಿತವಾಗಿ ಅವರ ಕೆಲಸ ಮಾಡಿಕೊಡಬೇಕು’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪಿಂಚಣಿ ಹಾಗೂ ಫವತಿ ವಾರಸ್ಸು ಖಾತೆ ಆಂದೋಲನದಲ್ಲಿ ಅವರು ಮಾತನಾಡಿದರು.

ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅವುಗಳನ್ನು ಪಡೆಯಲು ಸಾರ್ವಜನಿಕರು ಮಧ್ಯವರ್ತಿಗಳ ಮೊರೆ ಹೋಗಿ ಹಣ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜನತೆ ನೇರವಾಗಿ ತಮ್ಮ ಕೆಲಸಗಳಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಒಂದು ವೇಳೆ ಆ ಅಧಿಕಾರಿ ಕೆಲಸ ಮಾಡಿಕೊಡದೆ ಇದ್ದಲ್ಲಿ ಮೇಲಿನ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಹೇಳಬೇಕು. ತಪ್ಪು ಮಾಡಿದ ಅಧಿಕಾರಿಯ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.

ಉಪ ವಿಭಾಗಾಧಿಕಾರಿ ರಘುನಂದನ್ ಮಾತನಾಡಿ, ಹಲವು ವರ್ಷಗಳಿಂದ ಫವತಿ ಖಾತೆ ಮಾಡಿಕೊಳ್ಳದೇ ಇರುವುದರಿಂದ ರೈತರು ಅನೇಕ ಸೌಲಭ್ಯ ಪಡೆದುಕೊಳ್ಳಲು ವಿಫಲರಾಗುತ್ತಿದ್ದಾರೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅನೇಕ ರೈತರು ವಿಫಲರಾಗಿದ್ದಾರೆ. ಇದರ ಪರಿಣಾಮ ₹ 10 ಕೋಟಿ ಅನುದಾನ ವಾಪಸ್‌ ಹೋಗಿದೆ. ಈ ಯೋಜನೆಯಡಿ ಸಿಗುವ ₹ 10 ಸಾವಿರ ಸಹಾಯಧನದಿಂದ ದೂರ ಉಳಿದಿದ್ದಾರೆ ಎಂದರು.

ಜಿಲ್ಲಾಧಿಕಾರಿ ಅವರು ಆಹಾರ ಆದಾಲತ್ ಮಾಡಿದಂತೆ ಫವತಿ ವಾರಸ್ಸು ಖಾತೆ ಆಂದೋಲನ ಸಹ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ಆಂದೋಲನ ನಡೆಯುತ್ತಿದೆ. ಸಾರ್ವಜನಿಕರು ಈ ಯೋಜನೆಯಡಿ ಪಾಲ್ಗೊಂಡು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್, ಪಿಂಚಣಿ ಪ್ರಮಾಣ ಪತ್ರ, ಸಾಗುವಳಿ ಚೀಟಿ, ಫವತಿ ಮೂಲಕ ಖಾತೆ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸಿಗ್ಬತ್ತುಲ್ಲಾ, ತಾಲ್ಲೂಕು ಪಂಚಾಯಿತಿ ಇಒ ರವೀಂದ್ರ, ಉಪಾಧ್ಯಕ್ಷ ಬೈರಾರೆಡ್ಡಿ, ಸರ್ಕಲ್‌ ಇನ್‌ಸ್ಪೆಕ್ಟರ್‌ ಮಂಜುನಾಥ್, ಬಿಇಒ ವೆಂಕಟೇಶಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮುಖಂಡ ರಘುನಾಥರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT