ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳನ್ನು ವರ್ಗಾಯಿಸಿದರೆ ಹೆದ್ದಾರಿ ಬಂದ್

ಜಿಲ್ಲೆಯ ಹಿರಿಯ ಅಧಿಕಾರಿಗಳ ವರ್ಗಾವಣೆ ವದಂತಿ; ವಿವಿಧ ಸಂಘಟನೆಗಳ ಮುಖಂಡರಿಂದ ವಿರೋಧ
Last Updated 7 ಆಗಸ್ಟ್ 2019, 8:52 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಹೊಸ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳನ್ನು ಎಗ್ಗಿಲ್ಲದೆ ವರ್ಗಾವಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು.

ವರ್ಗ ಮಾಡಿದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ’ ಎಂದು ರೇಷ್ಮೆ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಯಲುವಹಳ್ಳಿ ಸೊಣ್ಣೆಗೌಡ ಹೇಳಿದರು.

ನಗರದಲ್ಲಿ ರೇಷ್ಮೆ ಹಿತರಕ್ಷಣಾ ವೇದಿಕೆ, ರೈತಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 12 ವರ್ಷವಾಗಿದೆ. ಮೊದಲಿನಿಂದಲೂ ಜಿಲ್ಲೆಯ ಜನರು ಪ್ರಾಮಾಣಿಕ ಅಧಿಕಾರಿಗಳನ್ನು ಎದುರು ನೋಡುತ್ತಿದ್ದರು. ಆದರೆ ಪ್ರಸ್ತುತ ಇರುವ ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆಗೆ ಪಿತೂರಿ ನಡೆದಿದೆ’ ಎಂದು ಆರೋಪಿಸಿದರು.

‘ಸದ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ, ಎಸ್ಪಿ ಕೆ.ಸಂತೋಷ್‌ ಬಾಬು ಸೇರಿದಂತೆ ಸಾಕಷ್ಟು ದಕ್ಷ, ಪ್ರಾಮಾಣಿಕ ಅಧಿಕಾರಿಗಳು ಇರುವುದು ನನ್ನ ಸೌಭಾಗ್ಯ. ಅವರೆಲ್ಲರೂ ಜನಪ್ರತಿನಿಧಿಗಳ ಜವಾಬ್ದಾರಿ ತಾವು ಹೊತ್ತು ಸಂವಿಧಾನಬದ್ಧವಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು’ ಎಂದು ಆಗ್ರಹಿಸಿದರು.

‘ಜಿಲ್ಲಾಧಿಕಾರಿ ಅವರು ಜಿಲ್ಲೆಯ ನೀರು, ಅಂತರ್ಜಲ ಸಮಸ್ಯೆ ಅರಿತು ಮುತುವರ್ಜಿಯಿಂದ ಕಲ್ಯಾಣಿಗಳ ಪುನಶ್ಚೇತನ ಕಾರ್ಯ ನಡೆಸಿ ಶ್ಲಾಘನೀಯ ಕೆಲಸ ಮಾಡಿದ್ದಾರೆ. ಜತೆಗೆ ಅಂತರ್ಜಲ ಸಮಸ್ಯೆ ನೀಗುವ ನಿಟ್ಟಿನಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಆದ್ಯತೆ ನೀಡಿರುವುದು ಅವರ ಸಮಾಜಮುಖಿ ಕಾಳಜಿ ತೋರಿಸುತ್ತದೆ. ಇಂತಹ ಅಧಿಕಾರಿಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಜ್ಞಾವಂತರು ಧ್ವನಿ ಎತ್ತಬೇಕಿದೆ. ಇಲ್ಲದೆ ಹೋದರೆ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ’ ಎಂದರು.

ರೈತಸಂಘದ ಗುಡಿಬಂಡೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮು ಮಾತನಾಡಿ, ‘ಸಮ್ಮಿಶ್ರ ಸರ್ಕಾರ ಹೋಗಿ ಹೊಸ ಸರ್ಕಾರ ರಚನೆಯಾದ 20 ದಿನಗಳಲ್ಲಿ ರಾಜ್ಯದಲ್ಲಿ ಸಾಕಷ್ಟು ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ಮಾಡಿರುವುದು ಕಳವಳದ ವಿಚಾರ. ಇದೀಗ ನಮ್ಮ ಜಿಲ್ಲೆಯ ಪ್ರಾಮಾಣಿಕ ಅಧಿಕಾರಿಗಳನ್ನು ಕಾರಣವಿಲ್ಲದೆ ವರ್ಗಾವಣೆ ಮಾಡಲು ಮುಂದಾಗಿರುವುದು ಖಂಡನೀಯ ವಿಚಾರ’ ಎಂದು ತಿಳಿಸಿದರು.

‘ಜಿಲ್ಲಾಧಿಕಾರಿ ಅವರು ಕಳೆದ ಒಂದು ವರ್ಷದಲ್ಲಿ ಜಲಮೂಲಗಳ ಅಭಿವೃದ್ಧಿಗೆ ಆಸಕ್ತಿ ತೋರುವ ಜತೆಗೆ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು, ರೈತರ ಅಹವಾಲು ಆಲಿಸಿ ಆದ್ಯತೆ ಮೆರೆಗೆ ಸಮಸ್ಯೆ ಬಗೆಹರಿಸುವ ಕೆಲಸ ಮಾಡುವ ಮೂಲಕ ಎಲ್ಲ ರಂಗಗಳಲ್ಲಿ ಜಿಲ್ಲೆಯನ್ನು ಪ್ರಗತಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ’ ಎಂದರು.

‘ಇದೀಗ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ ಎಂಬ ವದಂತಿ ಇದೆ. ಯಾವುದೇ ಕಾರಣಕ್ಕೂ ಈ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ವರ್ಗಾಯಿಸಿದರೆ ಪ್ರಗತಿಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವುದಲ್ಲದೇ, ಜಿಲ್ಲೆಯ ಬಂದ್‌ಗೆ ಕೂಡ ಕರೆ ನೀಡಲಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT