ಬುಧವಾರ, ಆಗಸ್ಟ್ 12, 2020
24 °C
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಒ ಬಿ.ಫೌಜಿಯಾ ತರನ್ನುಮ್ ಸೂಚನೆ

ವಸತಿ ಶಾಲೆಗಳಲ್ಲಿ ಮಳೆನೀರು ಸಂಗ್ರಹಿಸಿ: ಬಿ.ಫೌಜಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಸುವ ಜತೆಗೆ ಶಾಲೆಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದು, ಪೌಷ್ಟಿಕಾಂಶ ಭರಿತ ಸೊಪ್ಪು, ತರಕಾರಿ ಬೆಳೆಯುವ ಕೈತೋಟ ನಿರ್ಮಿಸಲು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಮತ್ತು ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರತಿ ವಸತಿ ಶಾಲೆಯ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗುವಂತೆ ಇತ್ತೀಚೆಗೆ ಪ್ರಕಟವಾಗುವ ಹೊಸ ಹೊಸ ಪುಸ್ತಕಗಳನ್ನು ಖರೀದಿಸಬೇಕು. ಕಂಪ್ಯೂಟರ್‌ಗಳಲ್ಲಿ ಡಿಜಿಟಲ್‌ ಗ್ರಂಥಾಲಯ ಬಳಸಿಕೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚಿಸಿದರು.

‘ನಿರ್ಮಾಣ ಹಂತದಲ್ಲಿರುವ ವಸತಿ ಶಾಲೆಗಳ ಎಲ್ಲಾ ಕಟ್ಟಡ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಮೇಲಿಂದ ಮೇಲೆ ಸೂಚನೆ ನೀಡಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತೆಗೆಯುವಂತೆ ಪ್ರೋತ್ಸಾಹಿಸುವ ಕೆಲಸವಾಗಬೇಕು. ವಸತಿ ನಿಲಯಗಳ ಎಲ್ಲಾ ಸಿಬ್ಬಂದಿ ಆರೋಗ್ಯ ಹಿತದೃಷ್ಟಿಯಿಂದ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದರು.

‘ಅಂಬೇಡ್ಕರ್ ಅಭಿವೃದ್ದಿ ನಿಗಮ, ವಾಲ್ಮೀಕಿ ಅಭಿವೃದ್ದಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮ ಮತ್ತು ಡಿ.ದೇವರಾಜು ಅರಸು ಅಭಿವೃದ್ದಿ ನಿಗಮಗಳಲ್ಲಿ 2016-17ನೇ ಸಾಲಿನಿಂದ 2019-20 ನೇ ಸಾಲಿನವರೆಗೆ ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಅನುಮೋದನೆ ಪಡೆದು ಆಯ್ಕೆಯಾಗಿರುವ ಎಲ್ಲಾ ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು