ಬುಧವಾರ, ಮಾರ್ಚ್ 29, 2023
23 °C

ಕನಿಷ್ಠ ಕೂಲಿಗೆ ಒತ್ತಾಯಿಸಿ ಫೆಬ್ರವರಿ 3 ರಂದು ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕನಿಷ್ಠ ಕೂಲಿ, ನಿವೃತ್ತಿ ವೇತನಕ್ಕಾಗಿ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ಬೆಂಗಳೂರಿನಲ್ಲಿ ಫೆ.3 ರಂದು ನಡೆಸುವ ಅನಿರ್ಧಿಷ್ಟಾವಧಿ ಧರಣಿ ಪೂರ್ವಭಾವಿಯಾಗಿ ತಾಲ್ಲೂಕಿನ ಪೆರೇಸಂದ್ರ ಸರ್ಕಾರಿ ಶಾಲೆಯಲ್ಲಿ ಜಿಲ್ಲೆಯ ಅಕ್ಷರ ದಾಸೋಹ ನೌಕರರು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮಗೆ ಯಾವುದೇ ಸೌಲಭ್ಯ, ಆರ್ಥಿಕ ಭದ್ರತೆ ನೀಡದೆ ಕಡೆಗಣಿಸಿವೆ. ಆಶಾ ಕಾರ್ಯಕರ್ತೆಯರಿಗೆ ಮತ್ತು ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರ ಕನಿಷ್ಠ ವೇತನ ನಿಗದಿ ಮಾಡಿದೆ. ಆದರೆ ಮಕ್ಕಳಿಗೆ ರುಚಿಕಟ್ಟಾಗಿ ಅಡುಗೆ ಮಾಡಿ ಬಡಿಸುವ ಬಿಸಿಯೂಟ ನೌಕರರ ಬಗ್ಗೆ ಕಾಳಜಿ ವಹಿಸಿಲ್ಲ. ನಮಗೆ ಕನಿಷ್ಠ ತಿಂಗಳಿಗೆ ₹21 ಸಾವಿರ ವೇತನ ನಿಗದಿ ಮಾಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಿಸಿಯೂಟ ನೌಕರರಿಗೆ ಕಳೆದ 17 ವರ್ಷಗಳಿಂದ ಸರಿಯಾದ ವೇತನ, ಪಿಂಚಣಿ ಇತರೆ ಸೌಲಭ್ಯಗಳನ್ನು ನೀಡದೆ ಮೋಸ ಮಾಡುತ್ತಿವೆ. ಆರೋಗ್ಯ ವಿಮೆ, ಪಿಂಚಣಿ ಸೌಲಭ್ಯ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಅವಕಾಶ ನೀಡಬೇಕು ಎಂಬ ಬೇಡಿಕೆ ಈಡೇರಿಸಿಲ್ಲ. ಎಲ್ಲ ನೌಕರರಿಗೂ ಎಲ್‌ಐಸಿ ಆಧಾರಿತ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ಯಾವುದೇ ಸಂಘಸಂಸ್ಥೆಗಳಿಗೆ ಈ ಯೋಜನೆ ಹಸ್ತಾಂತರಿಸಬಾರದು. ಕಾಯಂ ಸ್ವರೂಪದ ಉದ್ಯೋಗ ಸೃಷ್ಟಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ರಾಜ್ಯದಲ್ಲಿ 1.18 ಲಕ್ಷ ಮಹಿಳೆಯರು ಬಿಸಿಯೂಟ ನೌಕರರಾಗಿ ದುಡಿಯುತ್ತಿದ್ದಾರೆ. ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ದುಡಿಯುವ ಈ ಮಹಿಳೆಯರಿಗೆ ತಿಂಗಳಿಗೆ ಸುಮಾರು ₹2,700 ವೇತನ ಬಿಟ್ಟರೆ ಯಾವುದೇ ಸೌಲಭ್ಯಗಳಿಲ್ಲ. ಸುಮಾರು 19 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸೂಕ್ತ ವೇತನ, ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ’ ಎಂದು ಆರೋಪಿಸಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಬಿಸಿಯೂಟ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಲು ಸಿದ್ದವಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಸುಪ್ರೀಂ ಕೋರ್ಟಿನ ತೀರ್ಪನ್ನು ಗಾಳಿಗೆ ತೂರಿದೆ. ಇನ್ನೂ ರಾಜ್ಯ ಸರಕಾರಕ್ಕೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಬಾರಿ ಪ್ರತಿಭಟನೆ ಕೈಗೊಂಡರೂ ಪ್ರಯೋಜನವಾಗಿಲ್ಲ. ಹೀಗಾಗಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಫೆ.3 ರಂದು ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಕೇತನಹಳ್ಳಿ ಭಾಗ್ಯಮ್ಮ, ಬಂಡಹಳ್ಳಿ ಶಾರದಾ, ಅರೂರು ನಾರಾಯಣಮ್ಮ, ಕೋಡೆನಹಳ್ಳಿ ಭಾಗ್ಯಮ್ಮ, ಪೆರೇಸಂದ್ರ ಶಾಂತಮ್ಮ, ಮುತ್ತಕದಹಳ್ಳಿ ಆಲಮೇಲಮ್ಮ, ಪೆರೇಸಂದ್ರದ ಪರೀಧಾ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು