ಶನಿವಾರ, ಏಪ್ರಿಲ್ 4, 2020
19 °C
ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ: ಪ್ರತಿಬಂಧಕಾಜ್ಞೆ ಒಂದು ವಾರ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಮುಂದಿನ ಒಂದು ವಾರ ಪ್ರತಿಬಂಧಕಾಜ್ಞೆ ವಿಸ್ತರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಅವಧಿಯಲ್ಲಿ ಜನ ಗುಂಪು ಸೇರುವುದು, ಸಂತೆ, ಜಾತ್ರೆ, ಕಾರ್ಯಗಳನ್ನು ನಡೆಸುವುದು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಂದೇ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. ಎಲ್ಲ ವೈದ್ಯಕೀಯ ಸಿಬ್ಬಂದಿ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

‘ಕೊರೊನಾ ವೈರಸ್ ಬಗ್ಗೆ ನಿಗಾ ವಹಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈಗಾಗಲೇ ಸಂಪೂರ್ಣ ಮಾಹಿತಿ ಹಾಗೂ ತರಬೇತಿ ನೀಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜಿಲ್ಲೆಯ ಪ್ರತಿ ಮನೆಗೆ ಭೆೀಟಿ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಗೆ ವಿದೇಶಗಳಿಂದ ಬರುವವರ ಮಾಹಿತಿ ಕಲೆ ಹಾಕಿ, ಅಂತಹವರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿಟ್ಟು, ತಪಾಸಣೆಗೆ ಒಳಪಡಿಸಬೇಕು’ ಎಂದರು.

‘ಜಿಲ್ಲೆಗೆ ಫೆಬ್ರುವರಿಯಿಂದ ಶುಕ್ರವಾರದ ವರೆಗೆ ವಿದೇಶಗಳಿಂದ 125 ಜನರು ಬಂದಿದ್ದಾರೆ. ವಿದೇಶಗಳಿಂದ ಬಂದವರ ಮೇಲೆ ನಿರಂತರ ನಿಗಾ ಇಡಲಾಗಿದೆ. 89 ಮಂದಿಯನ್ನು ಗೃಹ ನಿರ್ಬಂಧನಕ್ಕೆ ಒಳಪಡಿಸಲಾಗಿದೆ. ಈ ಪೈಕಿ 89 ಜನರನ್ನು 14 ದಿನಗಳ ಗೃಹ ನಿರ್ಬಂಧನದಲ್ಲಿಟ್ಟು ತಪಾಸಣೆ ನಡೆಸಲಾಗುತ್ತಿದೆ. 25 ಮಂದಿ 14 ದಿನಗಳ ಗೃಹ ನಿರ್ಬಂಧನ ಪೂರ್ಣಗೊಳಿಸಿದ್ದಾರೆ’ ಎಂದು ತಿಳಿಸಿದರು.

‘ಒಂಬತ್ತು ಜನರು 28 ದಿನಗಳ ಗೃಹ ನಿರ್ಬಂಧನ ಪೂರ್ಣಗೊಳಿಸಿದ್ದಾರೆ. ಏಳು ಮಂದಿ ವಿದೇಶಗಳಿಗೆ ಹಿಂದಿರುಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ವದಂತಿಗಳಿಂದ ಭಯಪಡುವ ಅಗತ್ಯ ಇಲ್ಲ. ಮುಂಜಾಗ್ರತೆ ಪಾಲಿಸುವ ಮೂಲಕ ಮಾರಣಾಂತಿಕ ಸೋಂಕು ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಎಂ.ಯೋಗೇಶ್‌ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅನಿಲ್‌ ಕುಮಾರ್, ತಹಶೀಲ್ದಾರ್ ನಾಗಪ್ರಶಾಂತ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು