ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಕೆ.ಜಿ.ಜಗದೀಶ

ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಸೂಚನೆ
Last Updated 1 ಜನವರಿ 2020, 10:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮತದಾರರ ಪಟ್ಟಿಯಿಂದ ಯಾವೊಬ್ಬ ಮತದಾರನು ಹೊರಗೆ ಉಳಿಯಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಅಗತ್ಯ ಕ್ರಮ ಜರುಗಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಜಿ.ಜಗದೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಕ್ರಮದ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಮತದಾನ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಮೊದಲು ಸರಿಪಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಚುನಾವಣೆ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಪರಿಷ್ಕರಣೆ ಸುಲಭವಾಗಿ ನಡೆಸಬೇಕು. ಈಗಾಗಲೇ ಜಿಲ್ಲಾಡಳಿತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ’ ಎಂದು ತಿಳಿಸಿದರು.

‘ಬೂತ್ ಮಟ್ಟದ ಅಧಿಕಾರಿಗಳು ಮತ್ತು ಏಜೆಂಟ್‌ರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕು. ಇದರಲ್ಲಿ ಮುಖ್ಯವಾಗಿ ಪಟ್ಟಿಯಿಂದ ಹೆಸರನ್ನು ತೆಗದು ಹಾಕುವುದಾದರೆ ಬಹಳ ಎಚ್ಚರಿಕೆ ವಹಿಸಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಹೆಸರನ್ನು ತೆಗದುಹಾಕಬೇಕಾಗುತ್ತದೆ. ಅಲ್ಲದೆ, ಪುರುಷ ಹಾಗೂ ಸ್ತ್ರೀ ಲಿಂಗ ಅನುಪಾತದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಪರಿಶೀಲನೆ ನಡೆಸುವುದು ಅಗತ್ಯ’ ಎಂದರು.

‘ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆಯ ಕಿಟ್‌ಗಳನ್ನು ಹೊಂದಿರಬೇಕು. ಅಲ್ಲದೆ, ಕಾರ್ಯನಿರತ ಶಿಕ್ಷಕರು ಸಿಗದಿದ್ದಲ್ಲಿ ನಿವೃತ್ತ ಹೊಂದಿರುವ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳಾಗಿ ಆಯ್ಕೆ ಮಾಡಿ ಅವರನ್ನು ಹೆಚ್ಚು ಕಾರ್ಯ ಚಟುವಟಿಕೆಗಾರರನ್ನಾಗಿ ಮಾಡಬೇಕು. ಇದರಿಂದ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾರರ ಪಟ್ಟಿಯ ಸರಿ-ತಪ್ಪುಗಳನ್ನು ತಿದ್ದುಪಡಿ ಮಾಡಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಸೆಪ್ಟೆಂಬರ್ 1ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಜಿಲ್ಲಾಯಾದ್ಯಂತ ಚಾಲನೆ ನೀಡಿ ಹಂತ ಹಂತವಾಗಿ ನಡೆಸಲಾಗುತ್ತದೆ. ಈ ಕಾರ್ಯಕ್ರಮವನ್ನು ಜಿಲ್ಲೆ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‍ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಪಟ್ಟಿಯ ಪರಿಷ್ಕರಣೆ ನಡೆಸಿದ್ದಾರೆ. ಇದಲ್ಲದೆ, ಸಹಾಯವಾಣಿ ಸಂಖ್ಯೆ 1950 ಗೆ ಮತದಾರರಿಂದ ಬರುವ ದೂರಗಳನ್ನು ಪರಿಶೀಲಿಸಲಾಗುತ್ತಿದೆ. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಪರಿಶೀಲನೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್. ರಘುನಂದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT