ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ ಪೂರಕ

ಕಂಗಾನಹಳ್ಳಿಯ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ಉದ್ಘಾಟನೆ
Last Updated 4 ಜುಲೈ 2019, 10:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಮಾಜದ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಅನೇಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿ ವ್ಯಾಪ್ತಿಯ ಕಂಗಾನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಉನ್ನತ ಶಿಕ್ಷಣ ಒದಗಿಸಬೇಕು. ಶಿಕ್ಷಣ ಕೊರತೆಯಿಂದ ಗ್ರಾಮೀಣರಲ್ಲಿ ಆರೋಗ್ಯ, ಸ್ವಚ್ಛತೆ ಕುರಿತ ತಿಳುವಳಿಕೆ ಇರುವುದಿಲ್ಲ. ಆದ್ದರಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ನೈರ್ಮಲ್ಯ ಹಾಗೂ ಆರೋಗ್ಯದ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಹೇಳಿದರು.


‘ಕಳೆದ ಅವಧಿಯಲ್ಲಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು ನೀಡಲಾಗಿದೆ. ಪರಿಶಿಷ್ಟ ಸಮುದಾಯದವರ ಕಾಲೋನಿಗಳ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಲಾಗಿದೆ. ಬಡವರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.


‘ಮುದ್ದೇನಹಳ್ಳಿಯ ಗ್ರಾಮ ಪಂಚಾಯಿತಿಗೆ ಈವರೆಗೆ ₹20.82 ಕೋಟಿ ಅನುದಾನ ನೀಡಲಾಗಿದೆ. ಕಂಗಾನಹಳ್ಳಿಯಲ್ಲಿ ₹3.26 ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ವಿಕಾಸ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಂಗಾನಹಳ್ಳಿ ಗ್ರಾಮ ಪಂಚಾಯಿತಿಯನ್ನಾಗಿ ರಚನೆಗೆ ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು.


‘ನಿವೇಶನದ ಕೊರತೆಯಿಂದ ಬಾಬು ಜಗಜೀವನ ರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾತಿ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿವೇಶನ ಒದಗಿಸಲು ದಾನಿಗಳು ಮುಂದೆ ಬರಬೇಕು’ ಎಂದು ಶಾಸಕರು ಮನವಿ ಮಾಡಿದರು.


ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ನರಸಿಂಹಮೂರ್ತಿ, ಮುಖಂಡರಾದ ಜಿ.ಆರ್.ಶ್ರೀನಿವಾಸ್, ರಾಜಣ್ಣ, ಪ್ರಭಾಕರರೆಡ್ಡಿ, ದೇವಿಶೆಟ್ಟಿಹಳ್ಳಿ ಗಂಗಾಧರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT