ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮೂರನೇ ಅಲೆ ತಡೆಗೆ ಪೂರ್ವಸಿದ್ಧತೆ

ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾಹಿತಿ
Last Updated 29 ಮೇ 2021, 3:56 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೋವಿಡ್ ಪಿಡುಗಿನ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಾಗಿ ದುಷ್ಪರಿಣಾಮ ಬೀರುತ್ತದೆ ಎಂದು ಈಗಾಗಲೇ ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ವಿಶೇಷ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಶುಕ್ರವಾರ ಜಿಲ್ಲೆಯ ಗುಡಿಬಂಡೆ ನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ಸುರಪನೇನಿ ವಿದ್ಯಾಸಾಗರ ಫೌಂಡೇಶನ್ ಖಾಸಗಿ ಸಂಸ್ಥೆಯಿಂದ ನಡೆದ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೂರನೇ ಅಲೆ ಬರದಂತೆ ತಡೆಗಟ್ಟಲು ಸಮಗ್ರ ಯೋಜನೆ ರೂಪಿಸಲು ಅಗತ್ಯ ಕ್ರಮಕ್ಕಾಗಿ ಮೇ 29ರಂದು ಮಕ್ಕಳ ತಜ್ಞರೊಂದಿಗೆ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಜಾರಿಗೊಳಿಸಿರುವ 4 ದಿನಗಳ ಸಂಪೂರ್ಣ ಲಾಕ್‌ಡೌನ್‌ನಿಂದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮೂವತ್ತರ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಪ್ರಮಾಣ ಇದೀಗ ಕಳೆದೆರಡು ದಿನಗಳಿಂದ ಶೇ 12 ರವರೆಗೆ ಇಳಿಕೆಯಾಗಿದೆ. ಇದನ್ನು ಶೇ 5ರಷ್ಟಕ್ಕೆ ತಗ್ಗಿಸಲು ಗುರಿ ಹಾಕಿಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸಂಪೂರ್ಣವಾಗಿ ಶೂನ್ಯಕ್ಕೆ ತರಲಾಗುವುದು ಎಂದರು.

ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ಗೆ ಜನರೂ ಕೂಡ ಸಹಕಾರ ನೀಡುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಜಿಲ್ಲೆಯ ಖಾಸಗಿ ಸೇರಿದಂತೆ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ 170 ಆಮ್ಲಜನಕ ಬೆಡ್‌ಗಳು ಖಾಲಿ ಇವೆ. ಆಮ್ಲಜನಕ ಅವಲಂಬಿತ ರೋಗಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಕ್ಸಿಜನ್‌ಗೆ ಬೇಡಿಕೆ ಕಡಿಮೆಯಾಗಿದೆ. ಸೋಂಕಿತರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದರು.
ಮನೆಗಳಲ್ಲೇ ಕ್ವಾರಂಟೈನ್ ಇರುವವರಿಗೆ ಎಲ್ಲ ರೀತಿಯ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಇದಲ್ಲದೆ ಯಾರಿಗೆ ಮನೆಗಳಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ ಸೇರಿದಂತೆ ಇತರೆ ಸೌಲಭ್ಯ ಇಲ್ಲದವರಿಗೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೇರಿಸಲಾಗುತ್ತಿದೆ. ಗ್ರಾಮಗಳಲ್ಲಿ ಟಾಸ್ಕ್ ಫೋರ್ಸ್ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಪೌಷ್ಟಿಕ ಆಹಾರ ಸೇವಿಸುವುದರ ಜತೆಗೆ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ವೈದ್ಯರ ಸಲಹೆ ಪಡೆದು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಸಿಗ್ಬತ್ಉಲ್ಲಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವೀಂದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹ ಮೂರ್ತಿ, ಮುಖ್ಯಾಧಿಕಾರಿ ರಾಜಶೇಖರ್, ವಿದ್ಯಾಸಾಗರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT