ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸ್ಥಿತವಾಗಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ

ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಪೂರ್ವಭಾವಿ ಸಭೆ
Last Updated 21 ಫೆಬ್ರುವರಿ 2020, 20:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 4 ರಿಂದ 23ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಂಬಂಧಿತ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಭಾಂಗಣದಲ್ಲಿ ನಡೆದ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕ ಅಧಿಕಾರಿಗ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಪರೀಕ್ಷೆಯ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಪೇಜರ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ತರದಂತೆ ಕ್ರಮ ವಹಿಸಬೇಕು. ಅಧಿಕಾರಿಗಳು ಯಾವುದೇ ಗಡಿಬಿಡಿ ಮಾಡಿಕೊಳ್ಳದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು’ ಎಂದು ಹೇಳಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಸಿ.ಸಿ ಟಿವಿ ಕ್ಯಾಮೆರಾ ಹಾಗೂ ಕೇಂದ್ರಗಳಿಗೆ ಭದ್ರತೆಯನ್ನು ಕಲ್ಪಿಸಿಕೊಡಲು ಪೊಲೀಸ್ ಕಣ್ಗಾವಲು ವ್ಯವಸ್ಥೆ ಮಾಡಬೇಕು. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ಸಂಚಾರಿ ಜಾಗೃತಿ ದಳ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ವಿಶೇಷ ಜಾಗೃತಿ ದಳದ ಸದಸ್ಯರನ್ನು ನೇಮಿಸಬೇಕು. ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಲು ವೈದ್ಯಕೀಯ ವ್ಯವಸ್ಥೆಯನ್ನು ಕಲ್ಪಿಸಬೇಕು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಉಂಟು ಮಾಡುವಂತಹ ಪರೀಕ್ಷೆಗಳ ಕುರಿತು ಸುಳ್ಳು ವದಂತಿಗಳು ಹರಡದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿ ಪಿಯು ವಿದ್ಯಾರ್ಥಿಗಳಿಗೆ ಮಾರ್ಚ್ 4 ರಿಂದ 23ರವರೆಗೆ ಯಾವುದೇ ರೀತಿಯಾದ ಪಾಠ ಪ್ರವಚನಗಳನ್ನು ನಡೆಸದಂತೆ ಆದೇಶ ಬಂದಿದ್ದು, ಇದನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ಮುನಿರೆಡ್ಡಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT