ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ; ಶಿಡ್ಲಘಟ್ಟದ ಬೋದಗೂರಿನಲ್ಲಿ ನಾಳೆ

`ಜಿಲ್ಲಾಧಿಕಾರಿಗಳ ನಡೆ, ಗ್ರಾಮಗಳ ಕಡೆ’
Last Updated 19 ಫೆಬ್ರುವರಿ 2021, 3:36 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸರ್ಕಾರದ ಮಹತ್ತರದ ಕಾರ್ಯಕ್ರಮಗಳಲ್ಲಿ ಒಂದಾದ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಧಿಕಾರಿ ಆರ್.ಲತಾ ಅವರು ಫೆ.20ರಂದು ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋದಗೂರಿನಲ್ಲಿ ಗ್ರಾಮ ವಾಸ್ತವ್ಯ ಹೂಡುವುದಾಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ವಿವಿಧ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್‍ರವರು ಮಾತನಾಡಿ, ‘ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಆಯ್ಕೆಯಾಗಿರುವ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಮೊದಲಿಗೆ ಗ್ರಾಮದಲ್ಲಿನ ದೇವಾಲಯಕ್ಕೆ ಭೇಟಿ, ಪೂಜೆ ಮಾಡಿಸಲಿದ್ದಾರೆ. ನಂತರ ಎಸ್‍ಸಿ, ಎಸ್‍ಟಿ ಕಾಲೊನಿಗಳಿಗೆ ಭೇಟಿ ನೀಡಿ, ಅಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಗ್ರಾಮದ ನಿವಾಸಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಮಧ್ಯಾಹ್ನ ಗ್ರಾಮದ ಅಂಗನವಾಡಿ, ಇಲ್ಲವೇ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸವಿಯಲಿದ್ದಾರೆ. ನಂತರ, ಆರೋಗ್ಯ ಇಲಾಖೆ, ರೇಷ್ಮೆ ಇಲಾಖೆ, ತಾಲ್ಲೂಕು ಪಂಚಾಯಿತಿ ಕೃಷಿ ಇಲಾಖೆ, ತೋಟಗಾರಿಕೆ ಪಶುಸಂಗೋಪನೆ ಇಲಾಖೆ, ಸಾಮಾಜಿಕ ಮತ್ತು ವಲಯ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಿಂದ ಗ್ರಾಮಸ್ಥರಿಗೆ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯ ಕೈಗೊಂಡಿರುವ ಗ್ರಾಮಗಳಲ್ಲಿ ಆ ದಿನದಂದು ವಿವಿಧ ಆಸ್ಪತ್ರೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಕಾರ್ಯಕ್ರಮದ ಭಾಗವಾಗಿ ಆ ದಿನ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಅಥವಾ ಇತರೆ ಸರ್ಕಾರಿ ಜಾಗದಲ್ಲಿ ಗಿಡ ನೆಡುವ ಕಾರ್ಯಕ್ರಮ ಕಡ್ಡಾಯವಾಗಿ ಮಾಡಬೇಕು. ಅಂಗವಿಕಲರ ಇಲಾಖೆಯಿಂದ ವಿವಿಧ ಯೋಜನೆಗಳಡಿ ಆ ಗ್ರಾಮದ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಬೇಕು. ಅಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಜರಿರಬೇಕು ಎಂದು ಹೇಳಿದರು.

ಗ್ರಾಮ ವಾಸ್ತವ್ಯದ ದಿನದಂದು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ಅಥವಾ ಇತರ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ವಾಸ್ತವ್ಯ ಹೂಡಲಿದ್ದು, ಮರುದಿನ ಬೆಳಗ್ಗೆ ಗ್ರಾಮದಿಂದ ತೆರಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಎಚ್.ಅಮರೇಶ್, ಡಿಎಚ್‍ಒ ಡಾ.ಇಂದಿರಾ ಆರ್.ಕಬಾಡೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎಲ್.ರೂಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಟಾಚಾರಕ್ಕಲ್ಲ, ಆಡಂಬರ ಬೇಕಿಲ್ಲ

‘ರಾಜ್ಯ ಸರ್ಕಾರದ ನಿರ್ದೇಶನದಂತೆ ಫೆ.20ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ `ಜಿಲ್ಲಾಧಿಕಾರಿಗಳ ನಡೆ, ಗ್ರಾಮಗಳ ಕಡೆ’ ಕಾರ್ಯಕ್ರಮವು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಇದು ಕೇವಲ ಕಾಟಾಚಾರಕ್ಕೆ ಆಗಬಾರದು. ಗ್ರಾಮದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಅತ್ಯಂತ ಯಶಸ್ವಿಯಾಗಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಹೇಳಿದರು.

‘ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅತ್ಯಂತ ಮಹತ್ವವಾದ ಕಾರ್ಯಕ್ರಮ. ಇದನ್ನು ಆಡಂಬರದಿಂದ ಮಾಡದೇ, ಪ್ರಯೋಜನಕಾರಿಯಾಗುವಂತೆ ಮಾಡಬೇಕು. ಗ್ರಾಮೀಣ ಭಾಗದ ಜನರ ಅಭಿವೃದ್ಧಿಗಾಗಿ ಹಾಗೂ ಸರ್ಕಾರದ ಸೌಲಭ್ಯಗಳು ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಬೋದಗೂರು ಗ್ರಾಮ ಪರಿಚಯ

ಬೋದಗೂರು ಗ್ರಾಮ ಒಟ್ಟು 634-25 ಎಕರೆ ವಿಸ್ತೀರ್ಣ ಹೊಂದಿದ್ದು, 250-01 ಎಕರೆ ಖರಾಬು ಹಾಗೂ 384-20 ಎಕರೆ ಸಾಗುವಳಿ ವಿಸ್ತೀರ್ಣ ಹೊಂದಿದೆ. 211 ಖಾತೆದಾರರಿದ್ದಾರೆ. ಪರಿಶಿಷ್ಟ ಜಾತಿಯ ಪುರುಷರು 75, ಮಹಿಳೆಯರು 68 ಹಾಗೂ ಪರಿಶಿಷ್ಟ ಪಂಗಡದ ಪುರುಷರು 142, ಮಹಿಳೆಯರು 142 ಸೇರಿ ಒಟ್ಟು 834 ಜನಸಂಖ್ಯೆಯನ್ನು ಈ ಗ್ರಾಮ ಹೊಂದಿದೆ.

ಸಚಿವರು ಭಾಗಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ ಸುಧಾಕರ್ ಅವರು ಶಿಡ್ಲಘಟ್ಟದ ಬೋದಗೂರು, ಚಿಕ್ಕಬಳ್ಳಾಪುರದ ತಿಪ್ಪೇನಹಳ್ಳಿ ಹಾಗೂ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿಯ ಹಳೇಹಳ್ಳಿಯಲ್ಲಿ ಗ್ರಾಮ ವಾಸ್ತವ್ಯದ ಸಂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT