ಶನಿವಾರ, ಏಪ್ರಿಲ್ 4, 2020
19 °C
ಜಿಲ್ಲಾ ನ್ಯಾಯಾಲಯದ ನೂತನ ಸಂಕೀರ್ಣದಲ್ಲಿ ಪೊಕ್ಸೊ ಪ್ರಕರಣಗಳ ತ್ವರಿತ ವಿಚಾರಣೆ ನ್ಯಾಯಾಲಯ ಉದ್ಘಾಟನೆ

ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲಾ ನ್ಯಾಯಾಲಯದ ನೂತನ ಸಂಕೀರ್ಣದಲ್ಲಿನ ‘ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಕಾಯ್ದೆ’ (ಪೊಕ್ಸೊ) ಅಡಿ ಪ್ರಕರಣಗಳ ತ್ವರಿತ ವಿಚಾರಣೆ ನ್ಯಾಯಾಲಯವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಈ ನ್ಯಾಯಾಲಯ ತೆರೆಯಲಾಗಿದೆ. ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ ಬಿ.ಸಿ. ಭಾನುಮತಿ ಅವರು ಇಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತರ ವಿಚಾರಣೆ ನಡೆಸುವ ನ್ಯಾಯಾಧೀಶರು ಮಕ್ಕಳೊಟ್ಟಿಗೆ ಸಹಾನುಭೂತಿಯಿಂದ ಬೆರೆತು ನ್ಯಾಯದಾನ ಮಾಡುವ ಅವಶ್ಯಕತೆ ಇದೆ’ ಎಂದು ಹೇಳಿದರು.

‘ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತ ಮಕ್ಕಳ ವಿಚಾರಣೆ ನಡೆಸುವಾಗ ನ್ಯಾಯಾಧೀಶರು ಅತ್ಯಂತ ಸೂಕ್ಷ್ಮ ಮನಃಸ್ಥಿತಿಯಿಂದ ವ್ಯವಹರಿಸಬೇಕು. ಎಲ್ಲೂ ಮಗುವಿನ ಗುರುತು ಬಹಿರಂಗವಾಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಬೇಕು‘ ಎಂದು ತಿಳಿಸಿದರು.

‘ಮಕ್ಕಳ ವಿರುದ್ಧದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರ ಧೋರಣೆ ಕಕ್ಷಿದಾರರ ರಕ್ಷಣೆಯಷ್ಟೇ ಆಗಬಾರದು. ಮಗುವಿನ ಭವಿಷ್ಯವನ್ನೂ ಆಲೋಚಿಸುವಂತಿರಬೇಕು’ ಎಂದರು.

ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ ಬಿ.ಸಿ. ಭಾನುಮತಿ, 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ನಟರಾಜ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮೇಗೌಡ, ಪ್ರಧಾನ ಕಾರ್ಯದರ್ಶಿ ವಿನೋದ್‌ ಕುಮಾರ್ ಉಪಸ್ಥಿತರಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು