ಭಾನುವಾರ, ಅಕ್ಟೋಬರ್ 24, 2021
20 °C

ಚಿಂತಾಮಣಿ: ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ್ದರಿಂದ ಮೃತಪಟ್ಟ ರೈತ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಸರ್ವಾಧಿಕಾರದ ಧೋರಣೆ ಅನುಸರಿಸುತ್ತಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಕಾರನ್ನು ಚಲಾಯಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಣ್ಣೆದುರೇ ನಡೆದ ದುರಂತದಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಕಾರಿಗೆ ಬೆಂಕಿ ಹಚ್ಚಿದ್ದಾರೆ. ದೊಡ್ಡಮಟ್ಟದಲ್ಲಿ ಹಿಂಸಾಚಾರ ನಡೆದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಘಟನೆ ಕುರಿತು ತುಟಿ ಬಿಚ್ಚುತ್ತಿಲ್ಲ. ಕೇಂದ್ರ ಸಚಿವ ಮತ್ತು ಅವರ ಮಗನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿರುವುದು ಅಕ್ಷಮ್ಯ ಎಂದು ದೂರಿದರು.

ಎಂಟು ಜನರ ಸಾವಿಗೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅವರನ್ನು ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಉತ್ತರಪ್ರದೇಶದ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರದ ಪರವಾಗಿ ಮೋದಿ ರೈತರ ಹಾಗೂ ದೇಶದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಹನುಮಂತರಾಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೋನಪ್ಪಲ್ಲಿ ಕೋದಂಡ, ನಗರಸಭೆ ಮಾಜಿ ಸದಸ್ಯ ಸುಬ್ರಮಣ್ಯಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿಮಲ್ ಪ್ರಕಾಶ್, ಭಕ್ತರಹಳ್ಳಿ ವಿಶ್ವನಾಥ್, ಯುವ ಕಾಂಗ್ರೆಸ್‌ನ ಬಿಂಗಾನಹಳ್ಳಿ ಹರೀಶ್, ಮುನಿಯಪ್ಪ, ಕೃಷ್ಣಪ್ಪ, ತಳಗವಾರ ಮುನಿರಾಜು, ಖಾದರ್ ವಲ್ಲಿ, ನಾಗರಾಜು, ಕಾಲೊನಿ ಆಂಜನಪ್ಪ, ಬಸವರಾಜು, ನರಸಿಂಹಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.