ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ನಡುವತ್ತಿ ಗ್ರಾಮದ ಮುನಿಕುಳ್ಳಪ್ಪ ಸಾವಿನ ಪ್ರಕರಣ: ಕಪ್ಪುಪಟ್ಟಿ ಧರಿಸಿ ಮನೆಯಲ್ಲಿಯೇ ಪ್ರತಿಭಟಿಸಿದ ಸಮತಾ ಸೈನಿಕ ದಳದ ಪದಾಧಿಕಾರಿಗಳು
Last Updated 30 ಏಪ್ರಿಲ್ 2020, 13:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಡುವತ್ತಿ ಗ್ರಾಮದ ಮುನಿಕುಳ್ಳಪ್ಪ ಅವರನ್ನು ಹಲ್ಲೆ ನಡೆಸಿ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಪದಾಧಿಕಾರಿಗಳು ಗುರುವಾರ ಕಪ್ಪುಪಟ್ಟಿ ಧರಿಸಿ ಮನೆಗಳಲ್ಲಿಯೇ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಸಮತಾ ಸೈನಿಕ ದಳ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ, ’ಹೊಸಕೋಟೆ ತಾಲ್ಲೂಕಿನ ತಿರುಮಲಶೆಟ್ಟಿ ಹಳ್ಳಿ ಠಾಣೆ ವ್ಯಾಪ್ತಿಯ ಬಾರೊಂದರ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಮುನಿಕುಳ್ಳಪ್ಪ ಅವರ ಮೇಲೆ ಸುಳ್ಳು ಆರೋಪ ಹೊರೆಸಿ, ಚಿಂತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ‘ ಎಂದು ಆರೋಪಿಸಿದರು.

’ಈ ಪ್ರಕರಣದಲ್ಲಿ ಅಮಾನತುಗೊಂಡಿರುವ ತಿರುಮಲಶೆಟ್ಟಿಹಳ್ಳಿ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ರಘು, ಸಬ್‌ ಇನ್‌ಸ್ಪೆಕ್ಟರ್ ರಾಕೇಶ್, ಕಾನ್‌ಸ್ಟೆಬಲ್‌ಗಳಾದ ಸಂತೋಷ್, ಶ್ರೀನಿವಾಸ್, ಮುನಿವೀರಪ್ಪ ಮತ್ತು ಮಹದೇವರೆಡ್ಡಿ ಅವರನ್ನು ಕೂಡಲೇ ಬಂಧಿಸುವ ಜತೆಗೆ ಸೇವೆಯಿಂದ ವಜಾಗೊಳಿಸಬೇಕು‘ ಎಂದು ಆಗ್ರಹಿಸಿದರು.

’ದಲಿತ ವ್ಯಕ್ತಿಯ ಈ ಕೊಲೆಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಮೃತನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಮುನಿಕುಳ್ಳಪ್ಪ ಅವರ ಹಿರಿಯ ಪುತ್ರನಿಗೆ ಸರ್ಕಾರಿ ಕೆಲಸ ನೀಡಬೇಕು‘ ಎಂದು ಒತ್ತಾಯಿಸಿದರು.

’ಮುನಿಕುಳ್ಳಪ್ಪ ಅವರ ಸಾವಿನ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಇಲ್ಲದಿದ್ದರೆ ನಡುವತ್ತಿಯಿಂದ ಮುಖ್ಯಮಂತ್ರಿ ನಿವಾಸದ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಾಗುತ್ತದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT