ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿದ್ದುಪಡಿಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ

ರಸ್ತೆ ತಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳು
Last Updated 5 ನವೆಂಬರ್ 2020, 14:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರೈತ ವಿರೋಧಿ ಕಾಯ್ದೆಗಳ ವಿರುದ್ಧ ನಡೆಸಿದ ಹೋರಾಟಕ್ಕೆ ಸ್ಪಂದಿಸದ ಮತ್ತು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್‌ಸಿಸಿ) ಪದಾಧಿಕಾರಿಗಳು ನಗರದಲ್ಲಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂದಿನ ರಸ್ತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಸೋಂಕಿನ ಸಮಯದಲ್ಲಿ ಲಾಕ್‌ಡೌನ್‌ ಹೆಸರಿನಲ್ಲಿ ಜನರನ್ನು ಮನೆಯಿಂದ ಹೊರಬರದಂತೆ ತಡೆದು, ಕೃಷಿ ಸಂಬಂಧಿತ ಕಾಯ್ದೆಗಳಿಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತಂದು ರೈತ ಸಮುದಾಯಕ್ಕೆ ದ್ರೋಹ ಬಗೆದಿವೆ’ ಎಂದು ಆರೋಪಿಸಿದರು.

‘ಸುಗ್ರಿವಾಜ್ಞೆ ಮೂಲಕ ಮಾಡಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಇಡೀ ದೇಶ ವ್ಯಾಪಿ ರೈತರು, ಪ್ರಗತಿಪರ ಸಂಘಟನೆಗಳು ತೀವ್ರ ಸ್ವರೂಪದ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಹೋರಾಟ ಲೆಕ್ಕಿಸದೆ ತನ್ನಿಷ್ಟದಂತೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿರುವುದು ದುರಂತ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ದುಡಿಯುವ ವರ್ಗದ ಜನರನ್ನು ನೇರವಾಗಿ ಬೀದಿಗೆ ತಳ್ಳುವಂತಹ ಪ್ರಯತ್ನಗಳನ್ನು ಮಾಡುತ್ತಿವೆ. ರೈತರನ್ನು ಶಾಶ್ವತವಾಗಿ ಕೃಷಿಯಿಂದ ದೂರ ಮಾಡುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ’ ಎಂದು ಆಪಾದಿಸಿದರು.

ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ, ‘ರಾಜ್ಯ ಸರ್ಕಾರ ಜನಸಾಮಾನ್ಯರ ಹಿತ ಕಡೆಗಣಿಸಿ ರೈತರು, ಕಾರ್ಮಿಕರ ಹಿತ ಗಾಳಿಗೆ ತೂರಿ, ಕಾಯ್ದೆಗಳ ತಿದ್ದುಪಡಿ ಮೂಲಕ ಬಂಡವಾಳ ಶಾಹಿಗಳಿಗೆ ಅನುವು ಮಾಡಿಕೊಡಲು ಹೊರಟಿದೆ. ಕೂಡಲೇ ತಿದ್ದುಪಡಿಗಳನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ಹಣದಾಸೆಗೆ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಉಳ್ಳವರು, ಕಪ್ಪು ಹಣ ಹೊಂದಿದವರು ಯಥೇಚ್ಛವಾಗಿ ಭೂಮಿ ಖರೀದಿಸಿ ಬೇಲಿ ಹಾಕಿ, ರಿಯಲ್‌ ಎಸ್ಟೇಟ್‌ ಉದ್ಯಮದ ಮೂಲಕ ಹಣ ಮಾಡುವ ದಂಧೆ ಆರಂಭಿಸಲಿದ್ದಾರೆ. ಅನ್ನದಾತರಿಗೆ ಮಾರಕವಾದ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು’ ಎಂದು ಹೇಳಿದರು.

‘ಲಾಕ್‌ಡೌನ್‌ನಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಳ್ಳರ ರೀತಿಯಲ್ಲಿ ಕಾರ್ಪೋರೆಟ್‌ ಕಂಪೆನಿಗಳಿಗೆ ಧಾರೆ ಎರೆದಿರುವುದು ಅತ್ಯಂತ ಅಮಾನವೀಯ ಕ್ರಮ. ಇದು ಕೃಷಿ ರಂಗಕ್ಕೆ ಕಂಟಕ. ಇದರಿಂದ ರೈತರು ಬೀದಿಗೆ ಬೀಳುವ ಸಂದರ್ಭ ಬಂದಿದೆ’ ಎಂದರು.

ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು’ ಎಂದು ಆರೋಪಿಸಿದರು.

‘ರೈತನೇ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ರೈತರನ್ನು ಮೂಲೆಗುಂಪು ಮಾಡುವ ಕೆಲಸ ಮಾಡಲಾಗುತತಿದೆ. ಉದ್ಯಮಿಗಳ ಲಾಬಿಗೆ ಮಣಿದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತ ಬಂದ ಪರಿಣಾಮ, ಇವತ್ತು ಅನ್ನದಾತರು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ತಿಳಿಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಸ್‌.ವೆಂಕಟಸ್ವಾಮಿ, ಪದಾಧಿಕಾರಿಗಳಾದ ಎಚ್‌.ಪಿ.ರಾಮನಾಥ್, ವಿ.ವೇಣುಗೋಪಾಲ್, ಉಮಾ, ಎಸ್‌.ಎಂ.ನಾರಾಯಣಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT