ಭಾನುವಾರ, ಜುಲೈ 25, 2021
28 °C
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

ಸರ್ಕಾರಿ‌ ನೌಕರರಿಗೆ ರಕ್ಷಣೆ ಒದಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರ ಹತ್ಯೆ ನಡೆದಿದೆ. ಇಂತಹ ಘಟನೆ ರಾಜ್ಯದಲ್ಲಿ ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಹರೀಶ್ ಒತ್ತಾಯಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ತೋಪನಹಳ್ಳಿ ಗ್ರಾಮದ ರಾಮಮೂರ್ತಿ ಹಾಗೂ ವೆಂಕಟಪತಿ ಎಂಬುವರ ಜಮೀನಿನ ವ್ಯಾಜ್ಯದ ಸಂಬಂಧ ಪೊಲೀಸ್ ರಕ್ಷಣೆಯಲ್ಲಿ ಜಂಟಿ ಸರ್ವೆ ಕಾರ್ಯದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ವೆಂಕಟಪತಿ ಎಂಬುವವರು ಪೊಲೀಸರ ಸಮ್ಮುಖದಲ್ಲಿ ತಹಶೀಲ್ದಾರ್ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ಆಗಾಗ ಸಂಭವಿಸುತ್ತಿವೆ. ಕಂದಾಯ, ಭೂಮಾಪನ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಮೇಲೆ ಇಂತಹ ಹಲ್ಲೆ ಹಾಗೂ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.

ನೌಕರರು ಮತ್ತು ಅಧಿಕಾರಿ ವರ್ಗ ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವಂತಹ ವಾತಾವರಣ ನಿರ್ಮಾಣ ಮಾಡಲು ಸರಕಾರ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾನಿರತ ನೌಕರರು ಜಿಲ್ಲಾಧಿಕಾರಿ ‌ಆರ್.ಲತಾ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಚಿಕ್ಕನರಸಿಂಹಯ್ಯ, ಆರ್.ರಾಜೇಂದ್ರ, ಖಜಾಂಚಿ ಎಂ.ದಿನೇಶ್‍ಕುಮಾರ್, ಕಾರ್ಯದರ್ಶಿ ಎ.ಎನ್.ನಾಗರಾಜ್, ಸುನೀಲ್, ಆಶೋಕ್, ನಿರ್ದೇಶಕ ನಾಸೀರ್ ಹುದ್ದೀನ್, ಅಮರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.