ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಘಟಕ ದುರಸ್ತಿಗೊಳಿಸಿ: ಎಂ.ಬಿ. ಚಿಕ್ಕನರಸಿಂಹಯ್ಯ

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
Last Updated 12 ಫೆಬ್ರುವರಿ 2020, 13:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಬೇಸಿಗೆ ಕಾಲ ಹತ್ತಿರವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುತ್ತದೆ. ಆದ್ದರಿಂದಲೇ, ಅಧಿಕಾರಿಗಳು ಕೆಟ್ಟ ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ಚಿಕ್ಕಬಳ್ಳಾಪುರ ಬರದ ಜಿಲ್ಲೆ. ಈಗಾಗಲೇ 75ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಸಿಗೆ ಕಾಲ ಸಮೀಪಿಸುತ್ತಿದ್ದಂತೆಯೇ ಮತ್ತಷ್ಟು ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಹೆಚ್ಚಾಗಲಿದೆ. ಆದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಜನಸಾಮಾನ್ಯರಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡುವುದಕ್ಕೆ ಅಧಿಕಾರಿಗಳು ಮುಂದಾಗಬೇಕು’ ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್ ಮಾತನಾಡಿ, ‘ಜಿಲ್ಲೆಯಲ್ಲಿ 75 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಒಂದು ಗ್ರಾಮಕ್ಕೆ ಪ್ರತಿ ದಿನ ಮೂರು ಟ್ಯಾಂಕ್‌ನಂತೆ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ, ಸಮಸ್ಮಾತ್ಮಕ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮುಖಾಂತರ ನೀರು ಪೂರೈಕೆ ಮಾಡಲಾಗುತ್ತಿದೆ. 52 ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಿಸುತ್ತಿಲ್ಲ. ಕೂಡಲೇ ಘಟಕಗಳನ್ನು ದುರಸ್ತಿಗೊಳಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಹೊಂದಾಣಿಕೆಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗ, ಸಾರ್ವಜನಿಕರು ವಾಯು ವಿಹಾರ ಮಾಡುವ ಸ್ಥಳಗಳಲ್ಲಿ, ಶಾಲಾ-, ಕಾಲೇಜುಗಳ ಮುಂಭಾಗದಲ್ಲಿ ಉದ್ಯಾನ ನಿರ್ಮಾಣ ಮಾಡಬೇಕು. ಇದರಿಂದ ಪರಿಸರ ಸಂರಕ್ಷಣೆ ಜತೆಗೆ ಅಂತರ್ಜಲ ರಕ್ಷಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಜಿಲ್ಲೆಯು ರಾಜ್ಯದಲ್ಲಿಯೇ ಮಾದರಿಯಾಗಿ ಹೊರಹೊಮ್ಮಲಿದೆ’ ಎಂದು ಅಧ್ಯಕ್ಷರು ಹೇಳಿದರು.

‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಬಗ್ಗೆ ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸಲು ಆಶಾ ಕಾರ್ಯಕರ್ತೆರಿಗೆ ಹೆಚ್ಚು ಒತ್ತು ನೀಡಿ ಜಾಗೃತಿ ಮೂಡಿಸುವಂತೆ ಆದೇಶಿಸಬೇಕು. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಬಡ ಜನರು ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ. ಯೋಗೀಶ್ ಗೌಡ ಮಾತನಾಡಿ, ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ. ಈವರೆಗೆ 1.70 ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿದೆ’ ಎಂದರು.

ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಾತನಾಡಿ, ‘ಕೃಷಿ ಹೊಂಡಗಳಲ್ಲಿ ಮೀನುಗಳನ್ನು ಸಾಕಲು ಇಚ್ಚಿಸುವ ರೈತ ಫಲಾನುಭವಿಗಳ ಉತ್ತೇಜನಕ್ಕಾಗಿ ಮೀನುಗಾರಿಕೆ ಇಲಾಖೆಯಿಂದ ₹5,000 ಪ್ರೋತ್ಸಾಹಧನ ನೀಡಲಾಗುತ್ತದೆ. ಕೃಷಿ ಹೊಂಡ ಹೊಂದಿರುವ ರೈತರು ಈ ಯೋಜನೆ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಮುಖ್ಯ ಯೋಜನಾಧಿಕಾರಿ ಮಾಧುರಾಮ್ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT