ಶುಕ್ರವಾರ, ಜೂನ್ 18, 2021
28 °C
ಕಾಂಗ್ರೆಸ್ ವತಿಯಿಂದ ನಗರದಲ್ಲಿ ‘ಜನಧ್ವನಿ’ ಧರಣಿ ಸತ್ಯಾಗ್ರಹ

ಚಿಕ್ಕಬಳ್ಳಾಪುರ: ಕಾಯ್ದೆಗಳ ತಿದ್ದುಪಡಿ ಕೈಬಿಡುವಂತೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಗುರುವಾರ ‘ಜನಧ್ವನಿ’ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ನಗರದ ಶಿಡ್ಲಘಟ್ಟ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ‘ಸುಗ್ರಿವಾಜ್ಞೆ ಮೂಲಕ ಭೂಸುಧಾರಣೆ, ಕೈಗಾರಿಕೆ, ಎಪಿಎಂಸಿ ಸೇರಿ ಹಲವು ಕಾಯ್ದೆಗಳನ್ನು ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ತಳೆದಿದೆ. ಇದರಿಂದ ರೈತರು ಬೀದಿಪಾಲಾಗಿ, ಕೃಷಿ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬೀಳಲಿದೆ’ ಎಂದು ಹೇಳಿದರು.

‘ಲಾಕ್‌ಡೌನ್‌ನಂತಹ ಸಂಕಷ್ಟದ ಸಮಯವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರ ಮಹತ್ವದ ಕಾಯ್ದೆಗಳನ್ನು ಚರ್ಚೆ ಇಲ್ಲದೆ ತಿದ್ದುಪಡಿ ಮಾಡುವ ಮೂಲಕ ಕಾರ್ಪೋರೆಟ್‌ ಕಂಪೆನಿಗಳು, ಧನಿಕರಿಗೆ ಲಾಭ ಮಾಡಿಕೊಡಲು ಹೊರಟಿವೆ. ಜನಸಾಮಾನ್ಯರು, ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ತಿದ್ದುಪಡಿಗಳನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ಹಣದಾಸೆಗೆ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಉಳ್ಳವರು, ಕಪ್ಪು ಹಣ ಹೊಂದಿದವರು  ಯಥೇಚ್ಛವಾಗಿ ಭೂಮಿ ಖರೀದಿಸಿ ಬೇಲಿ ಹಾಕಿ, ರಿಯಲ್‌ ಎಸ್ಟೆಟ್‌ ಉದ್ಯಮದ ಮೂಲಕ ಹಣ ಮಾಡುವ ದಂಧೆ ಆರಂಭಿಸಲಿದ್ದಾರೆ. ಅನ್ನದಾತರಿಗೆ ಮಾರಕವಾದ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು’ ಎಂದು ಹೇಳಿದರು.

‘ಕೋವಿಡ್‌–19 ಚಿಕಿತ್ಸೆಗೆ ಸಂಬಂಧಿಸಿದ ಖರೀದಿಯಲ್ಲಿ ರಾಜ್ಯದಲ್ಲಿ ₹2,000 ಕೋಟಿ ಭ್ರಷ್ಟಾಚಾರ ನಡೆದಿದೆ. ರಾಜ್ಯ ಸರ್ಕಾರ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವ ಜತೆಗೆ ತಾನು ಸಂಗ್ರಹಿಸಿದ ದೇಣಿಗೆ ಮತ್ತು ಖರ್ಚಿನ ಬಗ್ಗೆ ಶ್ವೇತಪತ್ರ ಹೊರಡಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡ ಕೆ.ವಿ.ನವೀನ್ ಕಿರಣ್ ಮಾತನಾಡಿ, ‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು’ ಎಂದು ಆರೋಪಿಸಿದರು.

‘ರೈತನೇ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ರೈತರನ್ನು ಮೂಲೆಗುಂಪು ಮಾಡುವ ಕೆಲಸ ಮಾಡಲಾಗುತ್ತಿದೆ. ಉದ್ಯಮಿಗಳ ಲಾಬಿಗೆ ಮಣಿದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತ ಬಂದ ಪರಿಣಾಮ, ಇವತ್ತು ಅನ್ನದಾತರು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ತಿಳಿಸಿದರು.

‘ಕೋವಿಡ್‌ ಅವಧಿಯಲ್ಲಿ ಮಾಡಿರುವ ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ಈವರೆಗೆ ಕಾಂಗ್ರೆಸ್‌ ಮುಖಂಡರು ಸಾಕಷ್ಟು ಬಾರಿ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ಧಾರೆ. ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈವರೆಗೆ ವೆಚ್ಚದ ಬಗ್ಗೆ ಸರ್ಕಾರ ಮಾಹಿತಿ ನೀಡಿದಿರುವುದು ಸಂಶಯಕ್ಕೆ ಎಡೆ ಮಾಡಿದೆ’ ಎಂದು ಹೇಳಿದರು.

‘ಕೊರೊನಾ ನಿರ್ವಹಣೆಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ರಾಜ್ಯದಲ್ಲಿ ಅತಿವೃಷ್ಟಿಯಿಂದ ನಲುಗಿರುವ ಭಾಗದ ಜನರಿಗೆ ತ್ವರಿತಗತಿಯಲ್ಲಿ ಪರಿಹಾರ ಕಲ್ಪಿಸುವ ಕೆಲಸಗಳನ್ನು ಮಾಡಬೇಕು’ ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಎಸ್ ಎಂ ಮುನಿಯಪ್ಪ, ಮುಖಂಡರಾದ ನಂದಿ ಆಂಜಿನಪ್ಪ, ಯಲುವಹಳ್ಳಿ ರಮೇಶ್, ಬಿ.ಎಸ್.ರಫೀವುಲ್ಲಾ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣ ಮತ್ತು ಜಯರಾಂ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್, ಅಮಾನುಲ್ಲಾ, ಕಿಸಾನ್ ಕಾಂಗ್ರೆಸ್ ರಾಮಕೃಷ್ಣಪ್ಪ, ಕೆಎಂಎಫ್ ನಿರ್ದೇಶಕ ಭರಣಿ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು