ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ದೌರ್ಜನ್ಯ ತಡೆಗೆ ಆಗ್ರಹ

ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸದಸ್ಯೆಯರ ಜೈಲ್‌ ಭರೋ ಚಳವಳಿ
Last Updated 6 ಮಾರ್ಚ್ 2020, 14:42 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಿಐಟಿಯು ನೇತೃತ್ವದಲ್ಲಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸದಸ್ಯೆಯರು ದೇಶದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಜೈಲ್‌ ಭರೋ ಚಳವಳಿ ನಡೆಸಿದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಎಂ.ಲಕ್ಷ್ಮೀದೇವಮ್ಮ, ‘ಮಹಿಳೆಯರ ಹಕ್ಕುಗಳನ್ನು ದಮನ ಮಾಡಲು ಬಂಡವಾಳಶಾಹಿಗಳು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಮಹಿಳೆಯರ ಮೇಲಿನ ದಾಳಿ, ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದರು.

‘ಪ್ರಸ್ತುತ ದಿನಗಳಲ್ಲಿ ದೇಶದಲ್ಲಿನ ಮಹಿಳೆಯರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. 2017–18ರಲ್ಲಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.22 ರಷ್ಟು ಕಡಿಮೆಯಾಗಿದೆ. ಕೆಲಸದಲ್ಲಿ ಕನಿಷ್ಠ ವೇತನ, ಭದ್ರತೆ ಸಿಗುತ್ತಿಲ್ಲ. ಇದರಿಂದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಡಿವಾಣ ಹಾಕುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗುತ್ತಿವೆ. ಮಹಿಳೆಯರ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 3,800 ಅಂಗನವಾಡಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದು, 2018 ಅಕ್ಟೋಬರ್ ತಿಂಗಳಿನಿಂದ ನೌಕರರಿಗೆ ಹೆಚ್ಚಾಗಿರುವ ಗೌರವಧನವನ್ನು ವಿತರಿಸಿಲ್ಲ. ಸರ್ಕಾರ ಕೂಡಲೇ ಗೌರವಧನವನ್ನು ಬಿಡುಗಡೆಗೊಳಿಸಬೇಕು. ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ₨18 ಸಾವಿರ ನಿಗದಿಪಡಿಸಬೇಕು. ಕೆಲಸದ ಭದ್ರತೆ ಒದಗಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆ ಭರ್ತಿ ಮಾಡಬೇಕು. ಅಂಗನವಾಡಿ ಕಟ್ಟಡಗಳಿಗೆ ನರೇಗಾ ಯೋಜನೆ ಅಡಿ ಕಾಂಪೌಂಡ್ ನಿರ್ಮಿಸಬೇಕು. ಪ್ರತಿ ತಿಂಗಳು 25 ನೇ ತಾರೀಖಿನ ಒಳಗೆ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸಬೇಕು. ಮೊಟ್ಟೆ, ತರಕಾರಿ, ಗ್ಯಾಸ್ ಅನ್ನು ಮುಂಗಡವಾಗಿ ನೀಡಬೇಕು’ ಎಂದು ಆಗ್ರಹಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ರತ್ನಮ್ಮ ಮಾತನಾಡಿ, ‘ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಅಧಿಕಾರಿಗಳಿಗೆ ದೂರು ಸಲ್ಲಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೂರು ತಿಂಗಳಿಗೊಮ್ಮೆ ಕುಂದುಕೊರತೆ ಸಭೆ ನಡೆಸಬೇಕು. ಅರ್ಹತೆ ಇರುವ ಸಹಾಯಕಿಯರಿಗೆ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮುಂಬಡ್ತಿ ನೀಡಬೇಕು’ ಎಂದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಖಜಾಂಚಿ ವೆಂಕಟಲಕ್ಷ್ಮೀ, ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷೆ ಜಿ.ಎನ್.ಸುಜಾತಾ, ಕಾಯದರ್ಶಿ ಮುನಿರತ್ನಮ್ಮ, ಶಿಡ್ಲಘಟ್ಟ ತಾಲ್ಲೂಕು ಘಟಕದ ಅಧ್ಯಕ್ಷೆ ಅಶ್ವತ್ಥಮ್ಮ, ಖಜಾಂಚಿ ಗುಲ್ಜಾರ್, ಸಂಘದ ಪದಾಧಿಕಾರಿಗಳಾದ ಗೀತಾ, ಭಾಗ್ಯಮ್ಮ, ಸುಶೀಲಮ್ಮ, ವೆಂಕಟರೊಣಮ್ಮ, ಪದ್ಮಾವತಿ, ಲಕ್ಷ್ಮೀ ನರಸಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT