ಶುಕ್ರವಾರ, ಜೂನ್ 25, 2021
29 °C
ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲು ಪ್ರಧಾನಿಗೆ ಮನವಿ: ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಪ್ರಸ್ತುತ ಇರುವ ವೈದ್ಯಕೀಯ ಸೀಟುಗಳನ್ನು ದುಪ್ಪಟ್ಟು ಮಾಡುವಂತೆ ಪ್ರಧಾನಿಯೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ತಾಲ್ಲೂಕಿನ ಆವುಲಗುರ್ಕಿ ಗ್ರಾಮ ಪಂಚಾಯಿತಿ, ಸೂಲಕುಂಟೆ ಮತ್ತು ದೊಡ್ಡಪೈಲಗುರ್ಕಿ ಗ್ರಾಮ ಪಂಚಾಯಿತಿಯ ಕಮ್ಮತ್ತನಹಳ್ಳಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮೀಣ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂತಿಮ ವರ್ಷದ ಮೆಡಿಸಿನ್ ‌ಹಾಗೂ ಪ್ಯಾರಾ ಮೆಡಿಸಿನ್ ವಿದ್ಯಾರ್ಥಿಗಳಿಗೆ ತಕ್ಷಣ ತರಗತಿಗಳನ್ನು ಆರಂಭಿಸುವಂತೆ ಪ್ರಧಾನಿಯನ್ನು ಕೋರಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ‌ನಡೆದ ದುರ್ಘಟನೆಯಲ್ಲಿ ವರದಿ ಮಾಡಲು ತೆರಳಿದ್ದ ವರದಿಗಾರರ ಮೇಲೆ ಹಲ್ಲೆ ಮಾಡಿರುವುದು ಅಮಾನವೀಯ ಕೃತ್ಯವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ ಎಂದು ತಿಳಿಸಿದರು.

ನೀರಾವರಿ ಯೋಜನೆಗಳಿಂದ ಅಂತರ್ಜಲಮಟ್ಟ ವೃದ್ಧಿ: ಎಚ್.ಎನ್.ವ್ಯಾಲಿ ಯೊಜನೆಯಲ್ಲಿ ಜಿಲ್ಲೆಯ ಹಲವು ಕೆರೆಗಳಿಗೆ ನೀರು ತುಂಬಿಸಿರುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ. ಉಳಿದ ಕೆರೆಗಳಿಗೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ತುಂಬಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಆವುಲಗುರ್ಕಿ ಗ್ರಾಮ ಪಂಚಾಯಿತಿ, ಸೂಲಕುಂಟೆ ಗ್ರಾಮದ 12 ಹಕ್ಕಿ ಪಿಕ್ಕಿ ಜನಾಂಗದವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

ಇದೇ ವೇಳೆ ದೊಡ್ಡಪೈಲಗುರ್ಕಿ ಗ್ರಾಮ ಪಂಚಾಯಿತಿಯ ಕಮ್ಮತನಹಳ್ಳಿ ಗ್ರಾಮದ 42 ಜನರಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಸಚಿವರು, ‘ನಿಜವಾದ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆಯಾಗಿದೆ. ಮಹಿಳೆಯರ ಹೆಸರಲ್ಲಿ ಹಕ್ಕುಪತ್ರ ವಿತರಣೆ ಮಾಡಿರುವುದು ಸಂತಸವಾಗಿದೆ. ಮಹಿಳೆಯರು ಎಲ್ಲ ರಂಗದಲ್ಲೂ ಮುಂದೆ ಬರಬೇಕು. ಸರ್ಕಾರದ ಎಷ್ಟೋ ಯೋಜನೆಗಳಲ್ಲಿ ಈ ಯೋಜನೆ ನನಗೆ ತೃಪ್ತಿ ತಂದಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.