ಮಂಗಳವಾರ, ಅಕ್ಟೋಬರ್ 20, 2020
27 °C
ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಲ್ಲಿ ಅಕ್ರಮಗಳ ಆರೋಪ, ತಾಲ್ಲೂಕು ಪಂಚಾಯಿತಿ ಎದುರು ಡಿಎಸ್‌ಎಸ್‌ ಪದಾಧಿಕಾರಿಗಳ ಧರಣಿ ಸತ್ಯಾಗ್ರಹ

ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ನಡೆದಿದ್ದು, ಈ ಬಗ್ಗೆ ರಾಜ್ಯಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಪದಾಧಿಕಾರಿಗಳು ನಗರದಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್‌ ಜಿಲ್ಲಾ ಘಟಕದ ಸಂಚಾಲಕ ಬಿ.ವಿ.ಆನಂದ್, ‘ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ತಳ ಸಮುದಾಯಗಳ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ಮೂಲಕ ಕೋಟಿಗಟ್ಟಲೇ ಅನುದಾನ ಮಂಜೂರು ಮಾಡುತ್ತಿವೆ. ರಾಜಕಾರಣಿಗಳ ದ್ವಿಮುಖ ನೀತಿಯಿಂದಾಗಿ ದಲಿತರ ಅಭಿವೃದ್ಧಿ ಮರೀಚಿಕೆಯಾಗಿ ಉಳಿದಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪಂಗಡಗಳು ಮತ್ತು ಇತರೆ ದುರ್ಬಲ ಸಮುದಾಯಗಳು ಆರ್ಥಿಕ, ಸಾಮಾಜಿಕವಾಗಿ ತುಂಬಾ ಹಿಂದುಳಿವೆ. ತಳ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಆದರೆ ಅವು ಮಧ್ಯವರ್ತಿಗಳ ಪಾಲಾಗಿ, ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ’ ಎಂದು ತಿಳಿಸಿದರು.

‘ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಅಡಿ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಲೋಕೋಪಯೋಗಿ, ಪಂಚಾಯತ್‌ ರಾಜ್‌ ಇಲಾಖೆ ಮತ್ತು ನಿರ್ಮಿತಿ ಕೇಂದ್ರ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಕೆಆರ್‌ಐಡಿಎಲ್‌ಗೆ ದಲಿತರ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆಯಾಗುತ್ತಿದೆ. ಆದರೆ ಆ ಹಣ ಪರಿಶಿಷ್ಟ ಕಲ್ಯಾಣಕ್ಕೆ ಸದ್ಭಳಕೆಯಾಗದೆ ಅಧಿಕಾರಿಗಳು, ರಾಜಕಾರಣಿಗಳ ಜೇಬು ಸೇರುತ್ತಿದೆ’ ಎಂದು ಆರೋಪಿಸಿದರು.

‘ಅನೇಕ ಇಲಾಖೆಗಳಲ್ಲಿ ಇವತ್ತು ದಲಿತರ ಹೆಸರಿನಲ್ಲಿ ದಲಿತೇತರರು ಹಗಲು ದರೋಡೆ ನಡೆಸುತ್ತಿದ್ದಾರೆ. ದಲಿತರ ಅಭಿವೃದ್ಧಿಗೆ ಶ್ರಮಿಸಬೇಕಾದ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ಮರೆತು ಜಾಣ ಕುರುಡು ಪ್ರದರ್ಶಿಸುತ್ತಿದೆ. ಆಳುವ ಸರ್ಕಾರಗಳೆಲ್ಲ ಈ ವಿಚಾರದಲ್ಲಿ ಮೌನ ವಹಿಸುವುದು ಖಂಡನೀಯ’ ಎಂದು ಹೇಳಿದರು.

ಡಿಎಸ್‌ಎಸ್‌ ತಾಲ್ಲೂಕು ಘಟಕದ ಸಂಚಾಲಕ ಎ.ಕೃಷ್ಣಪ್ಪ ಮಾತನಾಡಿ, ‘ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಲ್ಲಿ ಅಕ್ರಮ ನಡೆಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಕೃಷಿಹೊಂಡಗಳ ಹೆಸರಿನಲ್ಲಿ ನಡೆದ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ಬರುವ ಹಣವನ್ನು ಪ್ರತ್ಯೇಕ ಬ್ಯಾಂಕ್‌ ಖಾತೆಯಲ್ಲಿಟ್ಟು ನಿರ್ವಹಿಸಬೇಕು. ಅಂಬೇಡ್ಕರ್, ಜಗಜೀವನ್ ರಾಮ್, ವಾಲ್ಮಿಕ ಭವನಗಳನ್ನು ಒಂದೇ ವಿನ್ಯಾಸದಲ್ಲಿ ನಿರ್ಮಿಸಬೇಕು’ ಎಂದು ತಿಳಿಸಿದರು.

‘ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಪ್ರತಿ ಮೂರು ತಿಂಗಳಿಗೊಮ್ಮೆ ದಲಿತ ಮುಖಂಡರ ವಿಶೇಷ ಸಭೆ ಕರೆದು, ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಬಗ್ಗೆ ಚರ್ಚಿಸಿ ಪರಿಶೀಲನೆ ನಡೆಸಬೇಕು. ಕಲಿತ ಕಾಲೋನಿಗಳಲ್ಲಿ ಕಾಂಕ್ರಿಟ್‌ ರಸ್ತೆ, ಚರಂಡಿಗಳನ್ನು ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.

ಡಿಎಸ್‌ಎಸ್‌ ತಾಲ್ಲೂಕು ಘಟಕದ ಸಂಘಟನಾ ಸಂಚಾಲಕ ಅಂದಾರ್ಲಹಳ್ಳಿ ವೆಂಕಟೇಶ್‌, ಖಜಾಂಚಿ ತ್ಯಾಗರಾಜ್, ಪದಾಧಿಕಾರಿಗಳಾದ ಅಂದಾರ್ಲಹಳ್ಳಿ ಚಿನ್ನಪ್ಪ, ಸಿ.ವಿ.ವೆಂಕಟೇಶ್‌, ಕಣಿತಹಳ್ಳಿ ಮುನಿಯಪ್ಪ, ಕರಗಪ್ಪ, ಬಾಲಪ್ಪ, ಲಕ್ಷ್ಮಯ್ಯ, ಗಂಗಾಧರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು