ಗುಡಿಬಂಡೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ‘ಸಮಾಜದಲ್ಲಿನ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲ್ಯ ವಿವಾಹ ಸೇರಿದಂತೆ ಕೆಲವೊಂದು ಮೂಢನಂಬಿಕೆಗಳಿಂದಾಗಿ ಜನಸಂಖ್ಯೆ ಹೆಚ್ಚಳವಾಗಿದ್ದು, ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಿದೆ’ ಎಂದರು.
ದೇಶದಲ್ಲಿನ ಬಡತನ ನಿರ್ಮೂಲನೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಜನಸಂಖ್ಯಾ ನಿಯಂತ್ರಿಸಬೇಕು. ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗದಿದ್ದರೆ, ಭೂಮಿ ಮೇಲೆ ಅಸಮತೋಲನ ಉಂಟಾಗಲಿದೆ. ಬಡತನ, ಅಜ್ಞಾನ, ಮಾಹಿತಿ ಕೊರತೆ, ಮೂಢನಂಬಿಕೆಗಳು, ಬಾಲ್ಯ ವಿವಾಹಗಳಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದೆ ಎಂದರು.
ಮಾನವ ಹಕ್ಕುಗಳ ಸಂಘದ ಡಿ.ಎಲ್. ಪರಿಮಳ ಮಾತನಾಡಿ, ‘ಹೆಣ್ಣು ಅಥವಾ ಗಂಡು ಮಗುವಾದರೆ, ಒಂದೇ ಮಗು ಸಾಕು ಎಂಬ ಮನೋಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಹೆಣ್ಣುಮಗು ಅಪಕೀರ್ತಿ, ಗಂಡು ಮಗು ಕೀರ್ತಿ ಎಂದು ಅನೇಕರು ತಪ್ಪಾಗಿ ಭಾವಿಸುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಮುಖ್ಯರಸ್ತೆಗಳಲ್ಲಿ ಭಿತ್ತಿಪತ್ರಗಳನ್ನು ಹಂಚುತ್ತಾ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರಸಿಂಹಮೂರ್ತಿ, ಆಡಳಿತ ವೈದ್ಯಾಧಿಕಾರಿ ಡಾ. ಪ್ರದೀಪ್, ನಂಜುಂಡಪ್ಪ, ಅಂಬರೀಶ್, ಸಮಿಉಲ್ಲಾ ಸೇರಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.