ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಎಸ್‌ಎಫ್‌ಐ ಆಗ್ರಹ

Last Updated 6 ಅಕ್ಟೋಬರ್ 2021, 3:31 IST
ಅಕ್ಷರ ಗಾತ್ರ

ಚಿಂತಾಮಣಿ: ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಕೊಲೆಯನ್ನು ತಡೆಗಟ್ಟಬೇಕು. ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದ ಬಳಿ ಜಮಾವಣೆಯಾಗಿ, ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೆಂಗಳೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂಕೇತಿಕವಾಗಿ ರಸ್ತೆ ತಡೆ ನಡೆಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ಪ ಮಾತನಾಡಿ, ಹೆಣ್ಣುಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ. ಮೈಸೂರಿನ ಘಟನೆ, ಹೈದರಾಬಾದಿನ ಸಿಂಗರೇನಿಯ ಘಟನೆ, ತಾಡಿಗೋಳ್ ಕ್ರಾಸ್‌ನಲ್ಲಿ ವಿದ್ಯಾರ್ಥಿನಿಯರ ಮೇಲಿನ ಹಲ್ಲೆ ಘಟನೆಗಳು ದೌರ್ಜನ್ಯಗಳಿಗೆ ಸಾಕ್ಷಿಯಾಗಿವೆ. ಎಸ್‌ಎಫ್‌ಐ ಸಂಘಟನೆ ಘಟನೆಗಳನ್ನು ತೀವ್ರವಾಗಿ ಖಂಡಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದರು.

ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗಳನ್ನು ರಚನೆ ಮಾಡಬೇಕು. ಜನಜಂಗುಳಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಬೀಟ್ ಪೊಲೀಸ್ ವ್ಯವಸ್ಥೆ ಮಾಡಬೇಕು. ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಭಾಗಗಳಿಂದ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳು ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಎಲ್ಲ ಮಾರ್ಗಗಳಲ್ಲೂ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಹಾಕಿರುವ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಬೇಕು. ಯಾವುದೇ ಜಾತಿ ತಾರತಮ್ಯ ಮಾಡದೆ ಕಳೆದ ವರ್ಷ ಮತ್ತು ಈ ವರ್ಷದ ವಿದ್ಯಾರ್ಥಿ ವೇತನವನ್ನು ನೀಡಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಮನೋಜ್ ಕುಮಾರ್ ಮಾತನಾಡಿ, ಅತಿಥಿ ಉಪನ್ಯಾಸಕರಿಗೆ ವೇತನ ಮಂಜೂರು ಮಾಡಿ ಉದ್ಯೋಗ ಭದ್ರತೆ ನೀಡಬೇಕು. ಖಾಸಗಿ ಶಾಲಾ, ಕಾಲೇಜುಗಳ ಟ್ಯೂಷನ್ ಹಾವಳಿಗೆ ಕಡಿವಾಣ ಹಾಕಬೇಕು. ಸರ್ಕಾರಿ ಆದೇಶವನ್ನು ಪಾಲಿಸದ ಶಾಲಾ ಕಾಲೇಜುಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT