ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 686 ವಿದ್ಯಾರ್ಥಿಗಳು ಗೈರು

ಕೋವಿಡ್ ಭೀತಿಯ ನಡುವೆ ಮೊದಲ ದಿನ ಸುಸೂತ್ರವಾಗಿ ನಡೆದ ಪರೀಕ್ಷೆ, 15,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು
Last Updated 25 ಜೂನ್ 2020, 12:46 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಲಾಕ್‌ಡೌನ್‌ ಕಾರಣಕ್ಕೆ ವಿಳಂಬಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರ ಕೋವಿಡ್‌ ಭೀತಿ, ಪೋಷಕರ ಆತಂಕದ ನಡುವೆ ಆರಂಭಗೊಂಡಿತು. ಮೊದಲ ದಿನ ದ್ವಿತಿಯ ಭಾಷೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಶೇ 95.79 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ದ್ವಿತಿಯ ಭಾಷೆ ಪರೀಕ್ಷೆಗೆ ಜಿಲ್ಲೆಯಲ್ಲಿ 16,345 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ 15,659 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದರೆ, 686 ವಿದ್ಯಾರ್ಥಿಗಳು ಗೈರಾದರು. ಪರೀಕ್ಷೆ ಬೆಳಿಗ್ಗೆ 10.30 ರಿಂದ 1.30ರ ವರೆಗೆ ನಡೆಯಿತು.

ಕೋವಿಡ್‌ ಭಯದ ಕಾರಣಕ್ಕೆ ಈ ಬಾರಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಆರೋಗ್ಯ ತಪಾಸಣಾ ವ್ಯವಸ್ಥೆ ಮಾಡಲಾಗಿತ್ತು. ಆದ್ದರಿಂದ , ವಿದ್ಯಾರ್ಥಿಗಳು ಬೆಳಿಗ್ಗೆ 8.30ರ ಸುಮಾರಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ, ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಗೋಚರಿಸಿದವು.

ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ವಿದ್ಯಾರ್ಥಿಗಳಿಗೆ ಜ್ವರ ಬಂದಿರುವುದನ್ನು ಪರೀಕ್ಷಿಸಲು ಥರ್ಮಲ್ ಸ್ಕ್ಯಾನರ್‌ನಿಂದ ತಪಾಸಣೆ ನಡೆಸಿದರು. ಸ್ಯಾನಿಟೈಸರ್‌ನಿಂದ ಕೈಶುಚಿಗೊಳಿಸಿಕೊಳ್ಳುವಂತೆ ನಿಗಾ ವಹಿಸಿದರು.

ಕೋವಿಡ್‌ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಎರಡು ಮಾಸ್ಕ್ ನೀಡಲಾಗಿತ್ತು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮುಖಗವಸು ಹಾಕಿಯೇ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳಲಾಯಿತು.

ಈ ಹಿಂದೆಲ್ಲ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಬಾರಿ ಕೋವಿಡ್‌ ಕಾರಣಕ್ಕೆ ಅಂತರಕ್ಕೆ ಒತ್ತು ನೀಡುವ ಉದ್ದೇಶದಿಂದ ಒಂದು ಕೊಠಡಿಯಲ್ಲಿ 18 ರಿಂದ 20 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆಗಾಗಿ ಜಿಲ್ಲೆಯಲ್ಲಿ 986 ಕೊಠಡಿಗಳನ್ನು ವೈರಸ್‌ ನಾಶಕ ದ್ರಾವಣ ಸಿಂಪಡಿಸಿ ಸಜ್ಜಗೊಳಿಸಲಾಗಿತ್ತು. ಖಾಸಗಿ ಅಭ್ಯರ್ಥಿಗಳಿಗಾಗಿ ಚಿಕ್ಕಬಳ್ಳಾಪುರದ ಸೇಂಟ್‌ ಜೋಸೆಫ್‌ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು. ಪ್ರತಿ ಕೇಂದ್ರಕ್ಕೂ ತಲಾ ಇಬ್ಬರಂತೆ 134 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಪರೀಕ್ಷಾ ಅಕ್ರಮಗಳ ಮೇಲೆ ನಿಗಾ ಇಡಲು ರಚಿಸಿದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿಚಕ್ಷಣಾ ದಳಗಳು ಮಾತ್ರವಲ್ಲದೇ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್‌ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿಐದು ಬಸ್‌ಗಳನ್ನು ಮೀಸಲಿರಿಸಲಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ, ಖಾಸಗಿ ಸೇರಿ 128 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಮೊದಲ ದಿನ ಎಲ್ಲಿಯೂ ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ ನಡೆಸಿ ಡಿಬಾರ್ ಆದ ಪ್ರಕರಣಗಳಾಗಲಿ, ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ. ಶನಿವಾರ (ಜೂನ್ 27) ಗಣಿತ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT