ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಬಳ್ಳಾಪುರ | ಎಸ್ಸೆಸ್ಸೆಲ್ಸಿ; 20 ಪರೀಕ್ಷಾ ಕೇಂದ್ರಗಳ ಕಡಿತ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ವರ್ಷ 72 ಕೇಂದ್ರಗಳಲ್ಲಿ ಪರೀಕ್ಷೆ; ಈ ಬಾರಿ 52 ಕೇಂದ್ರಗಳು
Published 6 ಮಾರ್ಚ್ 2024, 6:00 IST
Last Updated 6 ಮಾರ್ಚ್ 2024, 6:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 20 ಕೇಂದ್ರಗಳನ್ನು ಕಡಿತಗೊಳಿಸಲಾಗಿದೆ. 2023ರಲ್ಲಿ 72 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ ಈ ಬಾರಿ ಜಿಲ್ಲೆಯ 52 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. 

ಬಾಗೇಪಲ್ಲಿ ತಾಲ್ಲೂಕಿನಲ್ಲಿ 9, ಚಿಕ್ಕಬಳ್ಳಾಪುರ 7, ಚಿಂತಾಮಣಿ 11, ಗೌರಿಬಿದನೂರು 14, ಗುಡಿಬಂಡೆ 2 ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳು ಈ ಬಾರಿ ಇರಲಿವೆ. ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ತಗ್ಗುತ್ತಿದೆ. 

2021ರಲ್ಲಿ ಕೋವಿಡ್ ಇತ್ತು. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಅಂದು ಅಂತರ ಕಾಪಾಡಬೇಕಾಗಿತ್ತು. ಆದ್ದರಿಂದ 99 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. 2022ರಲ್ಲಿ 75 ಕೇಂದ್ರಗಳನ್ನು ತೆರೆಯಲಾಗಿತ್ತು. 2023ರಲ್ಲಿ 72 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಹೀಗೆ ವರ್ಷದಿಂದ ವರ್ಷಕ್ಕೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯು ತಗ್ಗುತ್ತಲೇ ಇದೆ.

ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಗುರುತಿಸಿದೆ. ಈ ಹಿಂದಿಂತೆ ಹತ್ತಿರದ ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳಿಗೆ ದೊರೆಯುತ್ತಿಲ್ಲ. ಹೋಬಳಿ, ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ.

ಈ ಬಾರಿ ಜಿಲ್ಲೆಯಲ್ಲಿ ಒಟ್ಟು 16,502 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 16,004 ಮಂದಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದರೆ ಉಳಿದವರು ಪುನರಾವರ್ತಿತ ಅಭ್ಯರ್ಥಿಗಳಾಗಿದ್ದಾರೆ.

ಬಾಗೇಪಲ್ಲಿ ತಾಲ್ಲೂಕಿನಲ್ಲಿ 2,503, ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 2,972, ಚಿಂತಾಮಣಿ 3,510, ಗೌರಿಬಿದನೂರು 3,666, ಗುಡಿಬಂಡೆ 745 ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2,608 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಪರಿಣತರಿಂದ ಪಾಠ: ಕಲಿಕೆಯಲ್ಲಿ ತೀರಾ ಹಿಂದುಳಿದ ಮತ್ತು ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ 7ರಿಂದ 8 ಶಾಲೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಪರಿಣತ ಶಿಕ್ಷಕರಿಂದ ಪಾಠ ಮಾಡಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬೈಲಾಂಜನಪ್ಪ ತಿಳಿಸಿದರು. 

‘ತೀರಾ ಹಿಂದುಳಿದ ಮತ್ತು ಹಿಂದುಳಿದ ಮಕ್ಕಳ ಕಲಿಕೆಯನ್ನು ಹೇಗೆ ಉತ್ತಮಗೊಳಿಸಬಹುದು ಎನ್ನುವ ವಿಶಿಷ್ಟ ತರಬೇತಿಗಳನ್ನು ನೀಡಲಾಗುತ್ತಿದೆ. ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಈ ತರಗತಿಗಳನ್ನು ನಡೆಸುತ್ತಿದ್ದೇವೆ. ಪಠ್ಯಗಳ ಪುನರಾವರ್ತನೆ ಮತ್ತು ಗುಂಪು ಕಲಿಕೆಗೂ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದರು. 

ಚಿಕ್ಕಬಳ್ಳಾಪುರ ಜಿಲ್ಲೆಯು 2023ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 96.15 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಐದನೇ ಸ್ಥಾನಕ್ಕೆ ಭಾಜನವಾಗಿತ್ತು. 2022ರಲ್ಲಿ ಶೇ 95.23ರಷ್ಟು ಫಲಿತಾಂಶದ ಮೂಲಕ ರಾಜ್ಯ ಮಟ್ಟದಲ್ಲಿ ‘ಎ’ ಗ್ರೇಡ್ ಪಡೆದಿತ್ತು.

‘300ರಿಂದ 250 ವಿದ್ಯಾರ್ಥಿಗಳಿಗೆ ಕೇಂದ್ರ’

ಈ ಹಿಂದೆ 100ರಿಂದ 150 ವಿದ್ಯಾರ್ಥಿಗಳಿಗೆ ಒಂದು ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗುತ್ತಿತ್ತು. ಆದರೆ ಈ ಬಾರಿ ಕನಿಷ್ಠ 300ರಿಂದ 350 ವಿದ್ಯಾರ್ಥಿಗಳು ಇದ್ದರೆ ಮಾತ್ರ ಅಲ್ಲಿ ಪರೀಕ್ಷಾ ಕೇಂದ್ರ ನೀಡಬೇಕು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ನಿರ್ದೇಶನ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬೈಲಾಂಜನಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು. 

ಈ ಹಿಂದೆ ಹಳ್ಳಿಗಳಲ್ಲಿಯೂ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಆದರೆ ಈಗ ಹೋಬಳಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಬೇಕು. ಗ್ರಾಮಾಂತರ ಪ್ರದೇಶಕ್ಕೆ ಕೇಂದ್ರಗಳು ಬೇಡ ಎಂದಿದ್ದಾರೆ ಎಂದರು. ಒಂದು ವೇಳೆ ಪ್ರಾಕೃತಿಕ ಅಡಚಣೆಗಳು ಇದ್ದರೆ ಮತ್ತು ಪರೀಕ್ಷಾ ಕೇಂದ್ರಕ್ಕೆ 15ರಿಂದ 20 ಕಿ.ಮೀ ದೂರವಿದ್ದರೆ ಅಂತಹ ಕಡೆ 200ರಿಂದ 250 ವಿದ್ಯಾರ್ಥಿಗಳು ಇದ್ದರೆ ಪರೀಕ್ಷಾ ಕೇಂದ್ರ ತೆರೆಯಲು ಅವಕಾಶವಿದೆ. ಈ ಎಲ್ಲ ಕಾರಣದಿಂದ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕಡಿಮೆ ಆಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT