ಚಿಕ್ಕಬಳ್ಳಾಪುರ: ಮಾ.31 ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 16,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಜಿಲ್ಲೆಯಲ್ಲಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು 308 ಫ್ರೌಡ ಶಾಲೆಗಳಿಂದ ಒಟ್ಟು 72 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ 8,268 ಬಾಲಕರು ಮತ್ತು 8020 ಬಾಲಕಿಯರು ಸೇರಿ ಒಟ್ಟು 16,288 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಪರೀಕ್ಷಾ ವಾತಾವರಣಕ್ಕೆ ಪೂರಕವಾದ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ತಾಲ್ಲೂಕು ಖಜಾನೆಯಿಂದ ಕೇಂದ್ರಗಳಿಗೆ ತಲುಪಿಸಲು 27 ವಿತರಣಾ ಮಾರ್ಗಗಳನ್ನು ರಚಿಸಲಾಗಿದೆ. ನಿಯಮಾವಳಿ ರೀತಿ ವೇಳಾಪಟ್ಟಿಯಂತೆ ಸಕಾಲಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಾಗೇಪಲ್ಲಿ ತಾಲ್ಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ 2,480 ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರ ತಾಲ್ಲೂಕಿನ 16 ಪರೀಕ್ಷಾ ಕೇಂದ್ರಗಳಲ್ಲಿ 2,943 ವಿದ್ಯಾರ್ಥಿಗಳು, ಚಿಂತಾಮಣಿ ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 3,731 ವಿದ್ಯಾರ್ಥಿಗಳು, ಗೌರಿಬಿದನೂರು ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 3,796 ವಿದ್ಯಾರ್ಥಿಗಳು ಮತ್ತು ಗುಡಿಬಂಡೆ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 686 ವಿದ್ಯಾರ್ಥಿಗಳು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ 2,652 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ ಎಂದರು.
ಪರೀಕ್ಷೆಯು ಏ.15 ರಂದು ಮುಕ್ತಾಯಗೊಳ್ಳಲಿದೆ. ಈ ಮಧ್ಯ ರಜಾ ಅವಧಿ ಇದೆ. ಆ ಸಮಯದಲ್ಲಿ ಅಥವಾ ಪರೀಕ್ಷಾ ಪೂರ್ವದ ಒಂದೆರಡು ದಿನಗಳಲ್ಲಿ ವಿದ್ಯಾರ್ಥಿಯು ಪಠ್ಯ ವಿಷಯಕ್ಕೆ ಸಂಬಂಧಿಸಿದಂತೆ ಏನಾದರೂ ಕಲಿಕಾ ಗೊಂದಲ ಇದ್ದರೆ ಕೇಳುವ ಸಾಧ್ಯತೆ ಇರುತ್ತದೆ. ತಮ್ಮ ಶಾಲಾ ಮಕ್ಕಳೊಂದಿಗೆ ನಿರಂತರ ಸಂಪರ್ಕದಲ್ಲಿ ಶಿಕ್ಷಕರು ಇರಬೇಕಾಗುತ್ತದೆ. ವಿದ್ಯಾರ್ಥಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಚ್ಚರಿಕೆವಹಿಸುವಂತೆ ಮುಖ್ಯಶಿಕ್ಷಕರು ನಿಗಾವಹಿಸಬೇಕು.ವಿಶೇಷವಾಗಿ ಸಾಧಾರಣ ಕಲಿಕೆಯುಳ್ಳ ಮಕ್ಕಳ ಮೇಲೆ ವಿಶೇಷ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರುಗಳು, ನೋಡಲ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.