ಸೋಮವಾರ, ಜನವರಿ 20, 2020
27 °C
ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ವಸತಿ ನಿಲಯಗಳ ಮೇಲ್ವಿಚಾರಕರ ಸಭೆ

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿ: ಎಂ.ಬಿ.ಚಿಕ್ಕನರಸಿಂಹಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ90ರಷ್ಟು ಉತ್ತಮ ಫಲಿತಾಂಶ ನೀಡುವ ಗುರಿಯನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮತ್ತಷ್ಟು ಉತ್ತೇಜನ ನೀಡಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣರಾಗುವ ರೀತಿಯಲ್ಲಿ ತರಬೇತುಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ವಸತಿ ನಿಲಯಗಳ ಮೇಲ್ವಿಚಾರಕರ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾದರು ಬಗೆಹರಿಸಬೇಕು. ಮಧ್ಯಾಹ್ನದ ಬಿಸಿಯೂಟದ ಜತೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾತ್ರ ಎರಡು ತಿಂಗಳವರೆಗೂ ಸಂಜೆ ಸಮಯದಲ್ಲಿ ಉಪಾಹಾರ ನೀಡುವ ಚಿಂತನೆ ನಡೆಸಿದ್ದೆವೆ. ಅಲ್ಲದೆ, ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತದೆ. ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಶಿಕ್ಷಕರು ಪರಿಣಾಮಕಾರಿ ಬೋಧನಾ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆಗಳನ್ನು ಇಲಾಖೆಯ ಕಡೆಯಿಂದ ಸಿದ್ಧಪಡಿಸಲಾಗುತ್ತದೆ. ಪರೀಕ್ಷೆ ಸಮೀಪಿಸುತ್ತಿರುವ ಕಾರಣ ಪ್ರತಿ ಶನಿವಾರ ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಬೇಕು. ಜಿಲ್ಲೆಯ ಕೆಲ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಕಪ್ಪುಹಲಗೆ ಉಪಯೋಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವುಗಳ ಬದಲಿಗೆ ಹಸಿರು ಹಲಗೆ ವ್ಯವಸ್ಥೆ ಮಾಡಲಾಗುತ್ತದೆ’ ಎಂದರು.

‘ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶಿಕ್ಷಕರಿಗೆ ಪ್ರತ್ಯೇಕವಾದ ಗುರು ಭವನ ನಿರ್ಮಾಣ ಮಾಡುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು. ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಮಾತನಾಡಿ ನರೇಗಾ ಯೋಜನೆ ಅಡಿ ಶಾಲೆಗಳಲ್ಲಿ ಕಾಂಪೌಂಡ್, ಶೌಚಾಲಯದಂತಯ ಮೂಲ ಸೌಕರ್ಯಗಳು, ಕೈತೋಟ ನಿರ್ಮಾಣಕ್ಕೆ ಸಹಕಾರ ಪಡೆಯಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಶಾಲಾ ಶಿಕ್ಷಕರು ಸಮಾಜವನ್ನು ನಿರ್ಮಾಣ ಮಾಡುವ ನಿರ್ಮಾಪಕರು. ವಿದ್ಯಾರ್ಥಿಗಳ ಭವಿಷ್ಯದ ರೂವಾರಿಗಳು. ಶಿಕ್ಷಕರು ಮನಸ್ಸು ಮಾಡಿದರೆ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಹುದ್ದೆಗೇರುವಂತೆ ಸ್ಪರ್ಧಾಮನೋಭಾವ ಬೆಳೆಸಬಹುದು. ಈ ನಿಟ್ಟಿನಲ್ಲಿ ಪ್ರಸ್ತುತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ 287 ಶಾಲೆಗಳಲ್ಲಿಯೂ ಉತ್ತಮ ಫಲಿತಾಂಶ ನಿರೀಕ್ಷಿಸಿದ್ದೇವೆ. ಗುರಿಯನ್ನು ಸಾಧಿಸಲು ಶಿಕ್ಷಕರ ಸಹಕಾರ ಅತ್ಯಗತ್ಯ’ ಎಂದರು.

ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿತದೃಷ್ಟಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೋಸ್ಕರ ಪ್ರತಿ ದಿನ ಅನುಸರಿಸುವ ಹೊಸ ದಿನಚರಿಯೊಂದನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಜಿ.ನಾಗೇಶ್, ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿ ಬಸವರಾಜು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು