ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ತಪ್ಪಿಸಲು ನರೇಗಾ ಬಲಪಡಿಸಿ: ಜಿ.ಎನ್.ನಾಗರಾಜ್ ಆಗ್ರಹ

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಎನ್.ನಾಗರಾಜ್ ಆಗ್ರಹ
Last Updated 10 ಡಿಸೆಂಬರ್ 2019, 13:14 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ದೇಶದಲ್ಲಿ ಇವತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೂಲಿಕಾರರು ಜೀವನೋಪಾಯಕ್ಕಾಗಿ ವಲಸೆ ಹೊರಟಿದ್ದಾರೆ. ಈ ವಲಸೆ ತಪ್ಪಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು (ನರೇಗಾ) ಬಲಪಡಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಎನ್.ನಾಗರಾಜ್ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.

‘ದೇಶದ ಪ್ರತಿ ಕೃಷಿ ಕೂಲಿಕಾರನಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 250 ದಿನ ಕೆಲಸ, ದಿನಕ್ಕೆ ₹600 ದಿನಗೂಲಿಗೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು. ಸಣ್ಣ ರೈತರು, ಕೂಲಿಕಾರರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸಿಗಬೇಕಾಗಿದೆ. ಸರ್ವರಿಗೂ ಸಮಬಾಳು, ಸಮಪಾಲು ತತ್ವದ ಅಡಿಯಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆಗಾಗಿ ರೈತರು, ಕೂಲಿಕಾರರು ತಮ್ಮ ಹಕ್ಕುಗಳನ್ನು ಪಡೆಯಲು ಒಗ್ಗೂಡಿ ಸಂಘಟಿತ ಹೋರಾಟ ನಡೆಸಬೇಕಾಗಿದೆ’ ಎಂದು ಹೇಳಿದರು.

‘ಇತ್ತೀಚೆಗೆ ಪ್ರಜಾಪ್ರಭುತ್ವದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂಬುದು ಮರೀಚಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ₹25 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡಿ, ಅದರಲ್ಲಿ ₹2.5 ಲಕ್ಷ ಕೋಟಿಯಷ್ಟು ದೊಡ್ಡ ಕಂಪನಿಗಳಿಗೆ ತೆರಿಗೆ ವಿನಾಯಿತಿ ನೀಡುತ್ತದೆ. ಆದರೆ, ಉದ್ಯೋಗ ಖಾತ್ರಿ ಯೋಜನೆಗೆ ಬರೀ ₹80 ಸಾವಿರ ಕೋಟಿ ನೀಡಿ, ಅದನ್ನು ಸಹ ಕಡಿತಗೊಳಿಸುತ್ತಿದೆ. ಉದ್ಯೋಗ ಖಾತ್ರಿ ಕೆಲಸಗಳನ್ನೂ ಕಡಿಮೆ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಕೃಷಿ ಕೂಲಿಕಾರರ ಸಮಸ್ಯೆಗಳು ಕುರಿತು ಚರ್ಚಿಸಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲು ಡಿ.13, 14,15 ರಂದು ಕಲಬುರ್ಗಿಯಲ್ಲಿ ಸಂಘದ ರಾಜ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಕೇರಳದ ಕಣ್ಣೂರಿನಲ್ಲಿ ಡಿ. 31, ಜನವರಿ 1 ಮತ್ತು 2 ರಂದು ಅಖಿಲ ಭಾರತ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ರಾಜ್ಯ ಸಮಿತಿ ಸದಸ್ಯ ಮುನಿವೆಂಕಟಪ್ಪ ಮಾತನಾಡಿ, ‘ಕೇಂದ್ರದ ಸರ್ಕಾರ ಇವತ್ತು ಕಾರ್ಪೋರೇಟ್ ಕಂಪನಿಗಳ ಪರ ಕೆಲಸ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು, ದಲಿತರು, ರೈತರು, ಮಹಿಳೆಯರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ವಸತಿ ರಹಿತ ಕೂಲಿಕಾರರಿಗೆ ಮನೆ, ಬೇಸಾಯ ಮಾಡಲು ಭೂಮಿ ನೀಡಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಸಮಿತಿ ಸದಸ್ಯ ಆರ್.ರಾಮಪ್ಪ, ಜಿಲ್ಲಾ ಸಂಚಾಲಕ ಕೆ.ನಾಗರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ಟಿ.ಸಾವಿತ್ರಮ್ಮ, ಜಿಲ್ಲಾ ಮುಖಂಡ ರಘುರಾಮರೆಡ್ಡಿ, ಗಂಗಾಧರಪ್ಪ, ಅಶ್ವತ್ಥಮ್ಮ, ನಾರಾಯಣಸ್ವಾಮಿ, ನರಸಿಂಹಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT