ಗುರುವಾರ , ಫೆಬ್ರವರಿ 27, 2020
19 °C
ಜಿಲ್ಲಾ ಮಟ್ಟದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ ನೀಡಿ, ನಿರಂತರ ಕಲಿಕೆಗೆ ಪ್ರೇರೇಪಿಸುವ ಮೂಲಕ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸಲು ಶ್ರಮಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೇವಲ 40 ದಿನ ಮಾತ್ರ ಬಾಕಿ ಇವೆ. ಶಿಕ್ಷಕರು ಸಮರ್ಪಕವಾಗಿ ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ಬಗೆಹರಿಸಬೇಕು. ಅಭ್ಯಾಸ ಪುಸ್ತಕ ಓದುವಂತೆ ಮಕ್ಕಳನ್ನು ಹುರುದುಂಬಿಸುವ ಕೆಲಸ ಮಾಡಬೇಕು. ಮಕ್ಕಳು ಬೆಳಿಗ್ಗೆ ಬೇಗ ಎದ್ದು ಓದುವ ಅಭ್ಯಾಸ ಮಾಡಿಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಿ ಅವರಿಗೆ ಘಟಕ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಬೇಕು’ ಎಂದು ಹೇಳಿದರು.

‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶನಿವಾರ, ಭಾನುವಾರ ವಿಶೇಷ ತರಗತಿಗಳನ್ನು ಆಯೋಜಿಸಿ ವಿಶೇಷ ಪಠ್ಯ ಬೋಧನೆ ಮಾಡಬೇಕು. ಜತೆಗೆ ವಿದ್ಯಾರ್ಥಿಗಳ ಸ್ವಚ್ಚತೆ ಮತ್ತು ಆರೋಗ್ಯದ ಕಡೆ ಕೂಡ ಗಮನ ಹರಿಸಬೇಕು. ಫಲಿತಾಂಶ ಉತ್ತಮ ಪಡಿಸಲು ವಿಶೇಷ ತರಬೇತಿ, ಸ್ಪಷ್ಟ ಓದು, ಶುದ್ಧ ಬರಹ, ಸರಳ ಗಣಿತ ಅಂಶಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಜಿ.ನಾಗೇಶ್ ಅವರು ಜಿಲ್ಲೆಯಲ್ಲಿ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಳಕ್ಕೆ ಇಲಾಖೆ ವರ್ಷವೀಡಿ ಕೈಗೊಂಡಿದ್ದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ರೂಪಿಸಿರುವ ವಿಶೇಷ ಪಠ್ಯ ಕ್ರಮಗಳ ಬೋದನೆ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಶಿವಲಿಂಗಯ್ಯ, ಚಿಕ್ಕಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶಾಂತಲಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ವಿಷಯ ಪರಿವೀಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು