ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ, ರಕ್ತಹೀನತೆ ತೊಡೆಯಲು ಶ್ರಮಿಸಿ

ಮಂಡಿಕಲ್ಲು ಹೋಬಳಿಯಲ್ಲಿ ಆರೋಗ್ಯ ಶಿಬಿರಕ್ಕೆ ಜಿಲ್ಲಾಧಿಕಾರಿ ಆರ್. ಲತಾ ಚಾಲನೆ
Last Updated 6 ಡಿಸೆಂಬರ್ 2020, 8:37 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅಪೌಷ್ಟಿಕತೆ, ರಕ್ತಹೀನತೆ ತೊಡೆದುಹಾಕಲು ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಆರೋಗ್ಯ ಇಲಾಖೆ ವತಿಯಿಂದ ಮಂಡಿಕಲ್ಲು ಹೋಬಳಿಯ ಪೇರೆಂಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಂಡಿಕಲ್ಲು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಆರೋಗ್ಯ ಶಿಬಿರಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಅಪೌಷ್ಠಿಕತೆ, ರಕ್ತಹೀನತೆ ತೊಡೆದು ಹಾಕುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆರೋಗ್ಯ ಇಲಾಖೆ ಗರ್ಭಿಣಿಯರಿಗೆ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು’ ಎಂದು ಸೂಚಿಸಿದರು.

‘ಆರೋಗ್ಯ ಶಿಬಿರಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಗೆ ಸರ್ಕಾರದಿಂದ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ವ್ಯಕ್ತಿಯು ಅನಾರೋಗ್ಯಕ್ಕೆ ತುತ್ತಾಗಿ ಆಂತಕಕ್ಕೆ ಒಳಗಾಗದಂತೆ ಎಚ್ಚರವಹಿಸಿ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಸಿಗೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು’ ಎಂದು ಹೇಳಿದರು.

‘ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ವಿವಿಧ ಯೋಜನೆಗಳ ಅಡಿ ಲಭ್ಯವಿರುವ ಸೌಲಭ್ಯಗಳ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಅನ್ನು ಪ್ರತಿಯೊಬ್ಬರಿಗೂ ವಿತರಿಸುವ ಜತೆಗೆ ಕಾರ್ಡ್‌ ಪ್ರಯೋಜನದ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

‘ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಗುಣಮುಖರನ್ನಾಗಿ ಮಾಡಬಹುದು. ಮಂಡಿಕಲ್ಲು ಹೋಬಳಿಯಲ್ಲಿರುವ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅಗತ್ಯ ಪೌಷ್ಠಿಕ ಆಹಾರ ಪೂರೈಕೆ ಮಾಡಬೇಕು. ಒಂದು ತಿಂಗಳಲ್ಲಿ ಈ ಭಾಗದಲ್ಲಿ ಯಾವುದೇ ಮಗು ಅಪೌಷ್ಠಿಕತೆಯಿಂದ ನರಳದಂತೆ ಕಾಳಜಿವಹಿಸಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಇಂದಿರಾ ಕಬಾಡೆ ಮಾತನಾಡಿ, ‘ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವ ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಆರೋಗ್ಯಕ್ಕಾಗಿ ಸೇವಿಸಬೇಕಾದ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜತೆಗೆ ತ್ವರಿತಗತಿಯಲ್ಲಿ ಆರೋಗ್ಯ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

‘ಆರೋಗ್ಯ ಕೇಂದ್ರ ಆವರಣದಲ್ಲಿ ಆಹ್ಲಾದಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಉದ್ಯಾನ ರೂಪಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಮುಖಾಂತರ ಪ್ರತಿ ಗ್ರಾಮದ ಜನರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಕೊರೊನಾ ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಚೆನ್ನಕೇಶವ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT