ಸೋಮವಾರ, ಸೆಪ್ಟೆಂಬರ್ 20, 2021
24 °C

ಚಿಂತಾಮಣಿ: ಶಿಕ್ಷಕರು ದೇಶ ಕಟ್ಟುವ ಶಿಲ್ಪಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ‘ಮಕ್ಕಳಿಗೆ ಜ್ಞಾನಾರ್ಜನೆ ನೀಡುವ ಮೂಲಕ ವಿವಿಧ ಕ್ಷೇತ್ರದಲ್ಲಿ ಜ್ಞಾನಿಗಳನ್ನು ತಯಾರು ಮಾಡುವ ಶಿಕ್ಷಕರು ದೇಶವನ್ನು ಕಟ್ಟುವ ಶಿಲ್ಪಿಗಳು’ ಎಂದು ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.

ಸಮಾಜದಲ್ಲಿ ಗುರುಗಳಿಗೆ ಉನ್ನತ ಸ್ಥಾನಮಾನವಿದೆ. ಅವರ ಮಾರ್ಗದರ್ಶನದಲ್ಲಿ ಅನೇಕ ಮಂದಿ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿ ಗುರುವಿನ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೇರಿಸುತ್ತಾರೆ. ಮಕ್ಕಳಿಗೆ ಜ್ಞಾನ, ಸದ್ಗುಣ ಕಲಿಸುವಂತಹ ಪವಿತ್ರ ವೃತ್ತಿ ಶಿಕ್ಷಕರದ್ದು ಎಂದು ನುಡಿದರು.

ತತ್ವಜ್ಞಾನಿ, ಚಿಂತಕ, ಶಿಕ್ಷಣ ತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಸ್. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶ, ತತ್ವ, ಚಿಂತನೆಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿತ್ತು. ಈ ವರ್ಷವೂ 30 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್‌, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಶಿಕ್ಷಕರನ್ನು ರೂಪಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯವ ಹರಿಕಾರರು ಎಂದು ಕರೆಯಬಹುದು ಎಂದರು.

ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್ ಮಾತನಾಡಿ, ಪ್ರತಿವರ್ಷ ಹಬ್ಬದ ಸಂಭ್ರಮದಲ್ಲಿ ಶಿಕ್ಷಕರ ದಿನ ಆಚರಿಸಲಾಗುತ್ತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ದಿನಾಚರಣೆಯನ್ನು ಬೆರಳೆಣಿಕೆಯಷ್ಟು ಮಂದಿಯನ್ನು ಸೇರಿಸಿಕೊಂಡು ಸರಳವಾಗಿ ಆಚರಿಸಲಾಗುತ್ತಿದೆ. ಮಕ್ಕಳ ಜತೆಗೆ ಹೆಚ್ಚಿನ ಒಡನಾಟ ಶಿಕ್ಷರೊಡನೆ ಇರುವುದರಿಂದ, ಶಿಕ್ಷಕರನ್ನು ಅನುಕರಣೆ ಮಾಡುತ್ತಾರೆ. ಹಾಗಾಗಿ, ಶಿಕ್ಷಕರು ಆದರ್ಶ ವ್ಯಕ್ತಿಗಳಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಸುರೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿದರು. ಕೃಷಿಕ ಸಮಾಜದ ಅಧ್ಯಕ್ಷ ಎಂ. ಗೋವಿಂದಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.