ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು ಹರಿಸಿ: ಮನವಿ ಸಲ್ಲಿಸಿದ ಡಾ.ಕೆ.ಸುಧಾಕರ್

Last Updated 7 ಜುಲೈ 2021, 14:08 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಜಾರಿ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ಡಾ.ಕೆ.ಸುಧಾಕರ್, ‘ಚಿಕ್ಕಬಳ್ಳಾಪುರವನ್ನು ಕೈಗಾರಿಕಾ ಹಬ್ ಆಗಿಸಿ ಅಭಿವೃದ್ಧಿಪಡಿಸಬೇಕು. ಬೆಂಗಳೂರು ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿಕ್ಕಬಳ್ಳಾಪುರ ಸಮೀಪವಿದೆ. ಹೀಗಿದ್ದರೂ ಕೈಗಾರಿಕಾಭಿವೃದ್ಧಿ ಆಗಿಲ್ಲ. ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಬೆಳೆಸಬೇಕು ಎಂದು ಮನವಿ ಸಲ್ಲಿಸಿದರು.

ಜಿಲ್ಲೆ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಬಂದರು ನಗರಗಳಾದ ಚೆನ್ನೈ ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ಗಡಿಭಾಗಕ್ಕೆ 10 ಕಿ.ಮೀ. ದೂರದಲ್ಲೇ ವಿಮಾನ ನಿಲ್ದಾಣವಿದೆ. ಹಾಗೆಯೇ ರೈಲು ಸಂಪರ್ಕವನ್ನೂ ಹೊಂದಿದೆ. ಉದ್ಯಮಗಳಲ್ಲಿ ದುಡಿಯುವ ಪ್ರತಿಭಾವಂತರು ಚಿಕ್ಕಬಳ್ಳಾಪುರದಲ್ಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಾಣದಿಂದ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಆಗಲಿದೆ. ಜೊತೆಗೆ ಮಾಲಿನ್ಯ, ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ಹೇಳಿದರು.

ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡಬೇಕು. ಈ ಜಿಲ್ಲೆಗಳ ಕೆರೆಗಳ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ಹಂಚಿಕೆ ಮಾಡಬೇಕು ಎಂದು ಕೋರಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆಶಯದಂತೆಯೇ 2024ರ ವೇಳೆಗೆ ಪ್ರತಿ ಹಳ್ಳಿಗೆ ನೀರು ಒದಗಿಸುವುದು ನನ್ನ ದೂರದೃಷ್ಟಿ ಆಗಿದೆ ಎಂದು ಈ ವೇಳೆ ಸುಧಾಕರ್ ವಿವರಿಸಿದರು.

ರಾಷ್ಟ್ರೀಯ ಹೆದ್ದಾರಿ-234 ನಲ್ಲಿ ಚಿಕ್ಕಬಳ್ಳಾಪುರ-ಚಿಂತಾಮಣಿ ಬೈಪಾಸ್ ನಿರ್ಮಾಣ ಕುರಿತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು. ಈ ಯೋಜನೆ ಕುರಿತ ಡಿಪಿಆರ್ ಅನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದೆ. ಇದನ್ನು ಪರಿಗಣಿಸಿ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗೆ ಸೇತುವೆ, ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು 2015ರ ಜುಲೈ ನಿಂದ ಆರಂಭವಾಗಿತ್ತು. 2017 ರ ಮಧ್ಯಭಾಗಕ್ಕೆ ಮುಗಿಯಬೇಕಿತ್ತು. ಆದರೆ 2018 ರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಕೂಡಲೇ ಕಾಮಗಾರಿ ಆರಂಭಕ್ಕೆ ಕ್ರಮವಹಿಸಬೇಕು ಎಂದರು.

ಮೆಟ್ರೊ ಹಾಗೂ ಉಪನಗರ ರೈಲು ಯೋಜನೆಗಳ ಮಾರ್ಗಗಳನ್ನು ಚಿಕ್ಕಬಳ್ಳಾಪುರವರೆಗೆ ವಿಸ್ತರಣೆ, ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ವಿಜ್ಞಾನಗಳ ಸಂಸ್ಥೆ ಹಾಗೂ ನರ್ಸಿಂಗ್ ಸಂಸ್ಥೆ ಆರಂಭ ಕುರಿತು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT