ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯ: ನ್ಯಾಯಾಧೀಶ ಕೆ.ಅಮರನಾರಾಯಣ

ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಜನತಾ ನ್ಯಾಯಾಲಯಕ್ಕೆ ಚಾಲನೆ
Last Updated 4 ಜನವರಿ 2020, 13:24 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ನಾಲ್ಕು ದಿನಗಳ ಕಾನೂನು ಸಾಕ್ಷರತಾ ಸಂಚಾರಿ ರಥ ಕಾರ್ಯಕ್ರಮದಲ್ಲಿ ನುರಿತ ನ್ಯಾಯಾಧೀಶರು ಹಾಗೂ ವಕೀಲರು ನೀಡುವ ಕಾನೂನು ಸಲಹೆಗಳನ್ನು ಸಾರ್ವಜನಿಕರು ಆಲಿಸಿ, ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಹೇಳಿದರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಜನತಾ ನ್ಯಾಯಾಲಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಾರ್ವಜನಿಕರು ಅನಾವಶ್ಯಕವಾಗಿ ನ್ಯಾಯಾಲಯಗಳ ಪದೇ ಪದೇ ಬಂದು ತಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಕಾನೂನು ಸಾಕ್ಷರತಾ ಸಂಚಾರಿ ರಥದ ಪರಿಕಲ್ಪನೆ ರೂಪಿಸಲಾಗಿದೆ. ಇದರ ಮೂಲಕ ಸಾರ್ವಜನಿಕರಿಗೆ 25ಕ್ಕೂ ಹೆಚ್ಚು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷವಾಗಿ ಬಾಲ್ಯ ವಿವಾಹ ಕಾಯ್ದೆ, ಭೂ ಕಂದಾಯ, ಆಸ್ತಿ ಹಕ್ಕು, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ತಲುಪಬೇಕಿದೆ’ ಎಂದು ತಿಳಿಸಿದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ ಮಾತನಾಡಿ, ‘ಸಾರ್ವಜನಿಕರು ಕಾನೂನು ಸೇವೆಗಳನ್ನು ಪಡೆಯಲು ಈ ಹಿಂದೆ ನ್ಯಾಯಾಲಯಗಳಿಗೆ ಬರಬೇಕಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಗಾಗಿ ಮಧ್ಯಸ್ಥಿಕೆ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಕಾನೂನು ಸಲಹೆಗಾರರು ನೀಡುವ ಸಲಹೆಗಳಿಂದ ಸಮಸ್ಯೆಯನ್ನು ಬಗೆಹರಿಸಿಕೊಂಡು ನೆಮ್ಮದಿಯ ಜೀವನ ನಡೆಸಬಹುದು’ ಎಂದರು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಟರಾಜ್, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಭಾನುಮತಿ, ಹಿರಿಯ ಸಿವಿಲ್ ನ್ಯಾಯಾಧೀಶೆ ರೂಪಾ, ಹಿರಿಯ ವಕೀಲ ಬಿ.ಆರ್.ಹರೀಶ್‌ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ, ವಕೀಲರ ಸಂಘದ ಜಿಲ್ಲಾ ಘಟಕದ ಜಂಟಿ ಕಾರ್ಯದರ್ಶಿ ಸುರೇಶ್‌ ಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT