ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ತ್ಯಾಗ ಸದಾ ಸ್ಮರಣೀಯ

‘ಪೊಲೀಸ್‌ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಅಭಿಮತ
Last Updated 21 ಅಕ್ಟೋಬರ್ 2020, 16:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಮಾಜದಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆ ಮಾಡುವುದು, ನೊಂದವರಿಗೆ ನ್ಯಾಯ ಒದಗಿಸುವುದು, ಮುಖ್ಯವಾಗಿ ಶಾಂತಿ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುವ ಪೊಲೀಸರ ತ್ಯಾಗ ಸದಾ ಸ್ಮರಣೀಯ’ ಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಅಭಿಪ್ರಾಯಪಟ್ಟರು.

ಅಣಕನೂರು ಬಳಿ ಇರುವ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ನಡೆದ ‘ಪೊಲೀಸ್‌ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಮಹತ್ವದ ಪಾತ್ರ ವಹಿಸಿದ್ದಾರೆ. ಪೊಲೀಸರ ಕಾರ್ಯ ಇತರೆ ಸರ್ಕಾರಿ ಕೆಲಸದಂತಿಲ್ಲ. ಒಂದೊಮ್ಮೆ ಅವಧಿ ಮೀರಿಯೂ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸಮಾಜ ಅವರಿಗೆ ನೈತಿಕ ಹಾಗೂ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಯೋಧರ ರೀತಿಯಲ್ಲಿ ಪೊಲೀಸರು ಕೂಡ ಪ್ರತಿ ನಾಗರಿಕನ ಹಕ್ಕುಗಳಿಗೂ ಚ್ಯುತಿ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಎಲ್ಲರಿಗೂ ಒಳ್ಳೆಯ ಜೀವನ ಕೊಡುವ ಸಂವಿಧಾನದ ಆಶಯವನ್ನು ಈಡೇರಿಸುತ್ತಿದ್ದಾರೆ. ಸರ್ಕಾರ ಪೊಲೀಸರಿಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಯೋಗಕ್ಷೇಮ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

‘ನಾವೆಲ್ಲರೂ ಪೊಲೀಸರ ರೀತಿಯಲ್ಲಿ ಆಲೋಚಿಸಿದರೆ ನಮ್ಮನ್ನು ಯಾರೂ ಕಾಯುವ ಅಗತ್ಯವಿಲ್ಲ. ನಾವು ನಮ್ಮ ಕರ್ತವ್ಯಗಳನ್ನು ಮರೆತಿರುವುದರಿಂದಲೇ ಪ್ರತಿಯೊಂದಕ್ಕೂ ಪೊಲೀಸರನ್ನು ಅವಲಂಬಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ತಮ್ಮ ಜೀವನವನ್ನೇ ಸಮಾಜದ ಸೇವೆಗೆ ಮುಡುಪಾಗಿಟ್ಟಿದ್ದ ಹುತಾತ್ಮ ಪೊಲೀಸರ ನಿಲುವು, ಆದರ್ಶಗಳು ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ದಾರಿ ದೀಪವಾಗಬೇಕು. ಉತ್ತಮವಾಗಿ ಕಾರ್ಯ ನಿರ್ವಹಿಸಿದವರನ್ನು ಜನರು ಎಂದಿಗೂ ಮರೆಯುವುದಿಲ್ಲ' ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಯುವಲ್ಲಿ ಪೊಲೀಸ್ ಇಲಾಖೆಯ ಶ್ರಮ ಶ್ಲಾಘನೀಯ. ಲಾಕ್‌ಡೌನ್ ಪ್ರಾರಂಭದ ದಿನಗಳಲ್ಲಿ ಜಿಲ್ಲಾಡಳಿತದೊಂದಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ತಡೆಯಲು ಸಾದ್ಯ
ವಾಯಿತು’ ಎಂದರು.

‘ಪೊಲೀಸ್ ಇಲಾಖೆ ಪ್ರತಿಯೊಬ್ಬ ಸಾರ್ವಜನಿಕರ ರಕ್ಷಣೆಗೆ ಇದೆಯೇ ಹೊರತು ಇನ್ನಾವುದೆ ಉದ್ದೇಶಕ್ಕಲ್ಲ. ಅದನ್ನು ಅರಿತುಕೊಂಡು ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಸಹಕಾರ ನೀಡಬೇಕು’ ಎಂದರು.

ಕಾರ್ಯಕ್ರಮದಲ್ಲಿ ಹುತಾತ್ಮರ ಸ್ತೂಪಕ್ಕೆ ಗಣ್ಯರು ಗೌರವ ಸಲ್ಲಿಸಿದರು. ಮೌನಚರಣೆ ಮತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಧ್ವಜಾರೋಹಣದ ಬಳಿಕ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ನಡೆಸಿಕೊಟ್ಟ ಕವಾಯತು ಎಲ್ಲರ ಗಮನ ಸೆಳೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT