ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಇಂದು ಶಿಕ್ಷಕರು ಕರ್ತವ್ಯಕ್ಕೆ ಹಾಜರು

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಪುನರಾರಂಭಕ್ಕೆ ತಯಾರಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶನ
Last Updated 4 ಜೂನ್ 2020, 19:45 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪುನರಾರಂಭಕ್ಕೆ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಪೂರಕ ಸಿಬ್ಬಂದಿ ಶುಕ್ರವಾರ (ಜೂನ್‌ 5) ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಶಾಲೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಸೂಚನೆಯಂತೆ ಗುರುವಾರ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು ಶಾಲೆಗಳನ್ನು ಸ್ವಚ್ಛಗೊಳಿಸಲು ಕ್ರಮವಹಿಸಿದರು.

ಕೊರೊನಾ ವೈರಸ್‌ ಸೋಂಕಿನ ಭೀತಿ ಮತ್ತು ಕೋವಿಡ್‌ ಕಾಯಿಲೆಯಿಂದ ತಲ್ಲಣಗೊಂಡಿರುವ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಗೊಂದಲದಲ್ಲಿರುವ ಹೊತ್ತಿನಲ್ಲಿಯೇ, ಸಾರ್ವಜನಿಕ ಶಿಕ್ಷಣ ಇಲಾಖೆ ಜೂನ್ 8 ರಿಂದ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಿದೆ.

ಜುಲೈ 1 ರಿಂದ 4–7ನೇ ತರಗತಿ, ಜುಲೈ 15 ರಿಂದ 1–3ನೇ ತರಗತಿ ಮತ್ತು 8 ರಿಂದ 10ನೇ ತರಗತಿ ಹಾಗೂ ಜುಲೈ 20 ರಿಂದ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯದಲ್ಲಿ ಶಾಲೆಗಳನ್ನು ಹಂತಹಂತವಾಗಿ ಪ್ರಾರಂಭಿಸುವುದಕ್ಕೆ ಸಂಬಂಧಿಸಿದಂತೆ ತರಗತಿಗಳನ್ನು ಪುನರಾರಂಭಿಸುವ ಪೂರ್ವಭಾವಿಯಾಗಿ ಮುಖ್ಯ ಶಿಕ್ಷಕರು ಪೋಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆ ಆಯೋಜಿಸುವಂತೆ ಆಯುಕ್ತರು ಸೂಚಿಸಿದ್ದಾರೆ.

ಅದರಂತೆ, ಜೂನ್‌ 5 ಮತ್ತು 6 ರಂದು ಶಾಲೆಗಳನ್ನು ಪುನರಾರಂಭಿಸಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಪೂರ್ವ ಸಿದ್ಧತಾ ಕ್ರಮಗಳನ್ನು ತೆಗೆದುಕೊಳ್ಳುವ ಮುಖ್ಯ ಶಿಕ್ಷಕರು. ಜೂನ್ 10 ರಿಂದ 12ರ ವರೆಗೆ ಪೋಷಕರು ಮತ್ತು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಸದಸ್ಯರ ಸಭೆ ಆಯೋಜಿಸಲಿದ್ದಾರೆ.

ಆ ಸಭೆಯಲ್ಲಿ ಪ್ರಸ್ತಾಪಿತ ದಿನಾಂಕಗಳಂದು ತರಗತಿಗಳನ್ನು ಆರಂಭಿಸುವ ಕುರಿತು, ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು ಯಾವ ಮಾದರಿ ಅಳವಡಿಸಿಕೊಳ್ಳುವುದು ಸೂಕ್ತ, ಶಾಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ಪಡೆಯಲು ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ.

ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ಜೂನ್ 15ರ ಒಳಗೆ ‘ಸ್ಟುಡೆಂಟ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಂ’ (SATS) ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡುವಂತೆ ಆಯುಕ್ತರು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT