ಶುಕ್ರವಾರ, ಅಕ್ಟೋಬರ್ 23, 2020
27 °C
ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಪತ್ರಿಕಾಗೋಷ್ಠಿ

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ನಿಶ್ಚಿತ: ರಮೇಶ್ ಬಾಬು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆಯಿದ್ದು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ’ ಎಂದು ಮಾಜಿ ಶಾಸಕ ಎಸ್‌.ಎಂ.ಮುನಿಯಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಶಿಕ್ಷಕರು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಹೃದಯವಂತಿಕೆ ಹೊಂದಿದ್ದಾರೆ. ಅವರ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ  ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಬಡವರು ಸೇರಿದಂತೆ ಎಲ್ಲ ವರ್ಗದವರಿಗೆ ನೀಡಿದ ಜನಪರ ಯೋಜನೆಗಳೇ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿದೆ’ ಎಂದರು.

‌‘ರಮೇಶ್‍ಬಾಬು ಅವರು ಈ ಹಿಂದೆ ಸಹ ವಿಧಾನ ಪರಿಷತ್ ಸದಸ್ಯರಾಗಿ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿಯೂ ಉತ್ತಮ ಸಂಪರ್ಕ ಹೊಂದಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಭಾಗದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿದು ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಿಕೊಳ್ಳುತ್ತೇವೆ’ ಎಂದು ಹೇಳಿದರು.

‘ನಾನು ಹಿಂದೆ ವಿಧಾನ ಪರಿಷತ್‌ ಸದಸ್ಯನಾಗಿದ್ದ ಸಂದರ್ಭದಿಂದಲೂ ಆಗ್ನೇಯ ಪದವೀಧರರ ಕ್ಷೇತ್ರದ ಎಲ್ಲಾ ಜಿಲ್ಲೆಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಬಾರಿ ಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಗಳಲ್ಲೂ ಸಕಾರಾತ್ಮಕ ಬೆಂಬಲ ವ್ಯಕ್ತವಾ
ಗಿದ್ದು, ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತೇನೆ’ ಎಂದು ರಮೇಶ್‌ಬಾಬು ಹೇಳಿದರು.

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ, ‘ನಾನು ಹಿಂದೆ ವಿಧಾನ ಪರಿಷತ್‌ ಸದಸ್ಯನಾಗಿದ್ದ ಸಂದರ್ಭದಿಂದಲೂ ಆಗ್ನೇಯ ಪದವೀಧರರ ಕ್ಷೇತ್ರದ ಎಲ್ಲಾ ಜಿಲ್ಲೆಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಬಾರಿ ಕ್ಷೇತ್ರದ ವ್ಯಾಪ್ತಿಯ ಐದು ಜಿಲ್ಲೆಗಳಲ್ಲೂ ಸಕಾರಾತ್ಮಕ ಬೆಂಬಲ ವ್ಯಕ್ತವಾಗಿದ್ದು, ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಜನರಿಗೆ ರಾಜಕೀಯವಾಗಿ ಕಾಂಗ್ರೆಸ್‌ ಪಕ್ಷ ಬಿಟ್ಟರೆ ಪರ್ಯಾಯ ಆಯ್ಕೆಯಿಲ್ಲ. ಇತರೆ ಪಕ್ಷಗಳ ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರು ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುತ್ತಾರೆ. ಜನರು ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ತುಂಬಲಿದ್ದು, ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭೆ ಉಪ ಚುನಾವಣೆಯಲ್ಲಿ ಸಹ ಪಕ್ಷದ ಅಭ್ಯರ್ಥಿಗಳು ಖಂಡಿತ ಗೆಲ್ಲುತ್ತಾರೆ’ ಎಂದು ಹೇಳಿದರು.

ಮುಖಂಡ ಆಂಜನಪ್ಪ ಮಾತನಾಡಿ, ‘ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಬಾಬು ಅವರ ಗೆಲುವಿಗೆ ಪಕ್ಷದ ಎಲ್ಲ ವಿಭಾಗಗಳ ಪದಾಧಿಕಾರಿಗಳು ಒಗ್ಗೂಡಿ ಶ್ರಮಿಸಬೇಕು. ಜಿಲ್ಲೆಯಲ್ಲಿ ಅವರಿಗೆ ಹೆಚ್ಚಿನ ಮತ ಕೊಡಿಸುವ ಮೂಲಕ ಪಕ್ಷದ ಅಸ್ತಿತ್ವ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ತಿಳಿಸಿದರು.

‘ರಾಜ್ಯದ ಜನ ಬಿಜೆಪಿಗೆ ಅಧಿಕಾರ ನೀಡಿ ಬೇಸತ್ತಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ನೀಡಿದ್ದ ಭರವಸೆಗಳೆಲ್ಲಾ ಹುಸಿಯಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಿಸೆಂಬರ್‌ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತರಾಗಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು’ ಎಂದರು.

ಮುಖಂಡರಾದ ಯಲುವಹಳ್ಳಿ ರಮೇಶ್‌, ಎಸ್‌.ಪಿ.ಶ್ರೀನಿವಾಸ್, ಜಿ.ಆರ್.ಶ್ರೀನಿವಾಸ್, ಜಯರಾಂ ಹಾಜರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು