ಗುರುವಾರ , ಆಗಸ್ಟ್ 11, 2022
26 °C
ಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ನ್ಯಾಯ ಸಮ್ಮತ ಚುನಾವಣೆ ನಡೆಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಗ್ರಾಮ ಪಂಚಾಯಿತಿ ಚುನಾವಣೆಗಾಗಿ ತಾಲ್ಲೂಕು ಕೇಂದ್ರಗಳು ಮತ್ತು ವಿವಿಧ ಗ್ರಾಮ ಪಂಚಾಯಿತಿಗಳಿಗೆ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ನಿಷ್ಪಕ್ಷಪಾತ, ಶಾಂತಿಯುತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಶನಿವಾರ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಿಗೆ ಮೊದಲನೇ ಹಂತದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ ಚುನಾವಣೆಯು ಪಕ್ಷ ರಹಿತವಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು. ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ತಿಳಿಸಿದರು.

‘ಚುನಾವಣೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಯಾವುದೇ ಅನುಮಾನ ಹಾಗೂ ಗೊಂದಲಗಳು ಮೂಡಿದರೆ ತಕ್ಷಣವೇ ಮೇಲಾಧಿಕಾರಿಗಳಿಂದ ಸ್ಪಷ್ಟನೆ ಪಡೆಯಬೇಕು. ಚುನಾವಣೆ ಕಾರ್ಯದ ಮಾರ್ಗದರ್ಶನ ಕೈಪಿಡಿಯನ್ನು ತಯಾರಿಸಲಾಗಿದೆ. ಅದನ್ನು ಓದಿಕೊಳ್ಳಬೇಕು’ ಎಂದರು.

‘ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸ್ವೀಕೃತಿಯ ದಿನದಿಂದ ಮತ ಎಣಿಕೆಯವರೆಗೆ ಹಾಗೂ ಎಣಿಕೆ ನಂತರದ ವರದಿಯನ್ನು ಸಲ್ಲಿಸುವ ಸಂಬಂಧ ಎಲ್ಲಾ ಅಗತ್ಯ ಪತ್ರ ನಮೂನೆ ಇತ್ಯಾದಿಗಳ ಬಗ್ಗೆ ಎಚ್ಚರ ವಹಿಸಬೇಕು. ಪ್ರಸ್ತುತ ಕೋವಿಡ್‌ ಇರುವುದರಿಂದ ಚುನಾವಣಾ ಆಯೋಗ ರೂಪಿಸಿರುವ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು’ ಎಂದು ಹೇಳಿದರು.

‘ಮತಗಟ್ಟೆಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಒದಗಿಸಿರುವ ಬಗ್ಗೆ ಪರಿಶೀಲಿಸಿ ಖಾತರಿ ಪಡಿಸಿಕೊಳ್ಳುವ ಜತೆಗೆ ಶುಚಿತ್ವಕ್ಕೆ ಒತ್ತು ನೀಡಬೇಕು’ ಎಂದು ತಿಳಿಸಿದರು.

ಉಪನ್ಯಾಸಕ ಶಂಕರ್ ರೆಡ್ಡಿ ಅವರು ಚುನಾವಣೆ ಸಿದ್ಧತೆ ತರಬೇತಿ ನೀಡಿದರು. ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.