ಗುರುವಾರ , ಆಗಸ್ಟ್ 11, 2022
27 °C

ಮರಾಠ ಅಭಿವೃದ್ಧಿ ನಿಗಮ ಕೈಬಿಡಲು ಸರ್ಕಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಮರಾಠ ಅಭಿವೃದ್ಧಿ ನಿಗಮವನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಬೇಕು ಎಂದು ಕರವೇ ಕಾರ್ಯಕರ್ತರು ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಮನವಿ ಮಾಡಿದ್ದರು. ಹಾಗಾಗಿ, ಪಟ್ಟಣದ ನ್ಯಾಷನಲ್ ಕಾಲೇಜಿನಿಂದ ಸಿವಿಲ್ ನ್ಯಾಯಾಲಯದ ಮುಖ್ಯರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಜನಜಂಗುಳಿ ಇರಲಿಲ್ಲ.

ಮುಖ್ಯರಸ್ತೆಯಲ್ಲಿನ ಅಂಗಡಿಗಳು, ಬೀದಿಬದಿ ವ್ಯಾಪಾರಸ್ಥರು, ಹೋಟೆಲ್‌ಗಳು, ಖಾಸಗಿ ಸಂಘ–ಸಂಸ್ಥೆಗಳು, ಮಾಂಸದ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಮುಂಗಟ್ಟು ಮುಚ್ಚಿದ್ದರು. ಸಾರಿಗೆ ನಿಗಮದ ಬಸ್‌ಗಳು, ಖಾಸಗಿ ಬಸ್‌ಗಳು, ಆಟೊ, ಕಾರುಗಳ ಸಂಚಾರ ಎಂದಿನಂತೆ ಇತ್ತು. ಸಿನಿಮಾ ಮಂದಿರಗಳು ಮುಚ್ಚಿದ್ದವು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ ಸಂಚಾರ ಇದ್ದರೂ, ಬೆರಳೆಣಿಕೆಯಷ್ಟು ಪ್ರಯಾಣಿಕರು ಸಂಚರಿಸಿದರು.

ಮುಖ್ಯರಸ್ತೆಯಲ್ಲಿ ಕರವೇ ನಾರಾಯಣಗೌಡ ಬಣ ಹಾಗೂ ರೈತ ಸಂಘದ ಮುಖಂಡರು ಬೈಕ್ ರ‍್ಯಾಲಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಸಾರ್ವಜನಿಕರು ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು.

ಕರವೇ ತಾಲ್ಲೂಕು ಅಧ್ಯಕ್ಷ ಕೆ.ಎನ್. ಹರೀಶ್ ಮಾತನಾಡಿ, ಮರಾಠರ ಮತಗಳನ್ನು ಪಡೆಯಲು ಹಾಗೂ ಸ್ವಾರ್ಥ ರಾಜಕೀಯಕ್ಕೆ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿ ಕೋಟ್ಯಂತರ ಅನುದಾನ ನೀಡಿದೆ. ಆದರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಡಿಮೆ ಅನುದಾನ ನೀಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಸರ್ಕಾರ ಅನೇಕ ನಿಗಮಗಳಿಗೆ ಅನುದಾನ ನೀಡಿಲ್ಲ. ವಿವಿಧ ಇಲಾಖೆ, ನಿಗಮಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ನೌಕರರಿಗೆ ಸಮರ್ಪಕವಾಗಿ ವೇತನ ಹಾಗೂ ಸೌಲಭ್ಯ ನೀಡಿಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದರಲ್ಲಿ ಅರ್ಥವಿಲ್ಲ. ಕೂಡಲೇ ಇದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸಬ್ ಇನ್‌ಸ್ಪೆಕ್ಟರ್ ಜಿ.ಕೆ. ಸುನೀಲ್ ಕುಮಾರ್ ನೇತೃತ್ವದಡಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು