ಬುಧವಾರ, ನವೆಂಬರ್ 25, 2020
19 °C
ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಆರ್‌. ಲತಾ ಎಚ್ಚರಿಕೆ

ಚಿಕ್ಕಬಳ್ಳಾಪುರ: ಹಸಿರು ಪಟಾಕಿ ಬಳಸಲು ಜಿಲ್ಲಾಧಿಕಾರಿ ತಾಕೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ದೀಪಾವಳಿ ಹಬ್ಬದಲ್ಲಿ ನಾಗರಿಕರು ಹಸಿರು ಪಟಾಕಿ ಬಳಕೆ ಮಾಡುವ ಮೂಲಕ ಸರಳವಾಗಿ ಹಬ್ಬ ಆಚರಿಸಿ ಆರೋಗ್ಯ ಮತ್ತು ಸ್ವಚ್ಛ ಪರಿಸರ ಕಾಪಾಡಿಕೊಳ್ಳಲು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು. 

‘ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸೋಂಕು ಹರಡಿದೆ. ಈ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರ ಸೋಂಕು ತಡೆಯಲು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲವು ಮಾರ್ಗಸೂಚಿಗಳನ್ನು ನೀಡಿ ಆದೇಶ  ಹೊರಡಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ರಾಜ್ಯ ಸರ್ಕಾರದ ಆದೇಶವು ನವೆಂಬರ್ 16ರವರೆಗೆ ಚಾಲ್ತಿಯಲ್ಲಿರುತ್ತದೆ. ಹಸಿರು ಪಟಾಕಿ ಹೊರತುಪಡಿಸಿ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಹಾಗೂ ಹಚ್ಚತಕ್ಕದಲ್ಲ. ಜಿಲ್ಲಾಡಳಿತದಿಂದ ಪರವಾನಗಿ ಪಡೆದ ನಂತರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

‘ವರ್ತಕರು ಕೂಡ ಜಿಲ್ಲಾಡಳಿತ ನಿಗದಿ ಪಡಿಸುವ ಸ್ಥಳದಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ‘ನಾಗರಿಕರು ಹಾಗೂ ಮಾರಾಟಗಾರರು ಸರ್ಕಾರದ ಆದೇಶ ಪಾಲಿಸಲು ಕೈಜೋಡಿಸಬೇಕು. ಸರ್ಕಾರದ ಆದೇಶ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್, ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಧಿಕಾರಿ ವಿಜಯಲಕ್ಷ್ಮೀ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು