ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ್ ಶ್ಯಾಮ್ ಬೆಂಬಲಿಗರಿಂದ ವರಿಷ್ಠರ ಭೇಟಿ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ವಿಚಾರ
Last Updated 6 ಜುಲೈ 2022, 4:17 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಪಕ್ಷದ ವಲಯದಲ್ಲಿ ತೀವ್ರವಾಗಿ ಕಾವೇರಿದೆ. ಕೆಪಿಸಿಸಿ ಸದಸ್ಯ ವಿನಯ್ ಶ್ಯಾಮ್ ಅವರ ಬೆಂಬಲಿಗರು ಮಂಗಳವಾರ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಸೋಮವಾರ ಶಾಸಕರಾದ ಸುಬ್ಬಾರೆಡ್ಡಿ, ಶಿವಶಂಕರರೆಡ್ಡಿ,ಜಿಲ್ಲೆಯ ಕಾಂಗ್ರೆಸ್‌ನ ಬಲಿಜ ಸಮುದಾಯದ ಮುಖಂಡರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಲಿಜ ಸಮುದಾಯದ ಮುಖಂಡರೂ ಆಗಿರುವ ಮಾಜಿ ಸಚಿವ ಎಂ.ಆರ್.ಸೀತಾರಾಂ ಪಕ್ಷ ತೊರೆಯದಂತೆ ಮನವೊಲಿಸಬೇಕು ಎಂದು ಕೋರಿದ್ದರು. ಆ ಸಮಯದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಬಯಸಿದರೆ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ ನೀಡುವುದಾಗಿ ಸಿದ್ದರಾಮಯ್ಯ ಸಹ ಹೇಳಿದ್ದರು.

ಈ ಬೆಳವಣಿಗೆಗಳು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಶ್ಯಾಮ್ ಬೆಂಬಲಿಗರು ಈ ಇಬ್ಬರೂ ನಾಯಕರನ್ನು ಭೇಟಿ ಮಾಡಿದ್ದಾರೆ. ವಿನಯ್ ಶ್ಯಾಮ್ ಪಕ್ಷ ಸಂಘಟಿಸುತ್ತಿದ್ದು ಅವರಿಗೆ ಟಿಕೆಟ್ ನೀಡುವಂತೆ ಮನವಿ
ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ‘ಲಾಯರ್’ ನಾರಾಯಣಸ್ವಾಮಿ, ಮಾಜಿ ಶಾಸಕಿ ಅನಸೂಯಮ್ಮ, ಜಿ.ಪಂ ಮಾಜಿ ಸದಸ್ಯೆ ನಾರಾಯಣಮ್ಮ, ಗ್ರಾ.ಪಂ ಮಾಜಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ನಿಯೋಗದಲ್ಲಿ ಇದ್ದರು.

‘ಕ್ಷೇತ್ರದ ಕಾಂಗ್ರೆಸ್ ಅಭಿಮಾನಿಗಳು ಅಲ್ಪಸಮಯ ದಲ್ಲಿಯೇ ನಾಯಕರನ್ನು ಭೇಟಿ ಮಾಡಿದ್ದೇವೆ. ಉಪಚುನಾವಣೆಯಲ್ಲಿ ನಂದಿ ಅಂಜಿನಪ್ಪ ಸೋತ ನಂತರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ವಿನಯ್ ಶ್ಯಾಮ್ ಪಕ್ಷವನ್ನು ಕಟ್ಟುತ್ತಿದ್ದಾರೆ. ಅವರ ನೇತೃತ್ವದಲ್ಲಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 16 ಸ್ಥಾನಗಳನ್ನು ಗೆದ್ದಿತು. 350ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು ಗೆಲುವು ಸಾಧಿಸಿದ್ದಾರೆ. ಅವರಿಗೆ ಟಿಕೆಟ್ ನೀಡುವಂತೆ ಕೋರಿದ್ದೇವೆ’ ಎಂದು ‘ಲಾಯರ್’ ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪ್ರತಿ ಬೂತ್ ಮಟ್ಟದಲ್ಲಿ 10ರಿಂದ 20 ಮಂದಿ ಕಾರ್ಯಕರ್ತರನ್ನು ವಿನಯ್ ಶ್ಯಾಮ್ ಭೇಟಿ ಮಾಡುತ್ತಿದ್ದಾರೆ. 8ರಿಂದ 10 ಸಾವಿರವಿದ್ದ ಕಾಂಗ್ರೆಸ್ ಸದಸ್ಯರ ಡಿಜಿಟಲ್ ನೋಂದಣಿಯನ್ನು 30 ಸಾವಿರಕ್ಕೆ ಹೆಚ್ಚಿಸಿದ್ದಾರೆ. ಹೊರಗಿನ ಅಭ್ಯರ್ಥಿಗಿಂತ ಸ್ಥಳೀಯವಾಗಿ ಜನರ ಜತೆ ಇರುವುವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದೆವು’
ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಚಿಕ್ಕಬಳ್ಳಾಪುರ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇದೆ. ಪಕ್ಷ ಸಂಘಟಿಸುವವರಿಗೆ, ಮತದಾರರ ಮನಸ್ಸಿನಲ್ಲಿ ಇರುವವರಿಗೆ ಟಿಕೆಟ್ ನೀಡಲಾಗುವುದು. ಎಐಸಿಸಿ ಸಹ ಆಂತರಿಕ ಸಮೀಕ್ಷೆ ನಡೆಸಲಿದೆ ಎಂದಿದ್ದಾರೆ ಎಂದು ನಾರಾಯಣಸ್ವಾಮಿ ಮಾಹಿತಿ ನೀಡಿದರು.

ವಿನಯ್ ಶ್ಯಾಮ್ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಈಗಾಗಲೇ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವರು ಎನ್ನುವ ಸುದ್ದಿ ಪಕ್ಷದ ವಲಯದಲ್ಲಿ ಹರಿದಾಡುತ್ತಿತ್ತು. ಆದರೆ ಸೋಮವಾರ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಸಿದ್ದರಾಮಯ್ಯ, ‘ರಕ್ಷಾ ರಾಮಯ್ಯ ಸ್ಪರ್ಧಿಸುವುದಾದರೆ ಚಿಕ್ಕಬಳ್ಳಾಪುರ ಟಿಕೆಟ್ ನೀಡುತ್ತೇವೆ’ ಎಂದಿದ್ದು ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರ ಗರಿಗೆದರುವಂತೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT