ಗುರುವಾರ , ಏಪ್ರಿಲ್ 22, 2021
22 °C
11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಿ.ಎಸ್.ನಾಯಿಕ ಸಲಹೆ

ಪ್ರಜಾಪ್ರಭುತ್ವ ಬಲವರ್ಧನೆಗೆ ಮತ ಚಲಾಯಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಮತದಾನವು ನಮ್ಮ ಸಂವಿಧಾನವು ನೀಡಿರುವ ಮೂಲಭೂತ ಹಕ್ಕು. ಹೊಸದಾಗಿ ಮತಪಟ್ಟಿಗೆ ಸೇರ್ಪಡೆಯಾಗುವ ಯುವ ಮತದಾರರು ಕಡ್ಡಾಯವಾಗಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸುಭದ್ರಗೊಳಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ  ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಇಚ್ಛೆಯಂತೆ ಆಡಳಿತ ನಡೆಯಬೇಕು. ಮತದಾನದಿಂದ ಮಾತ್ರ ಮುಂದಿನ ಭವಿಷ್ಯ ನಿರ್ಧರಿಸುವುದು ಸಾಧ್ಯ. ಹೀಗಾಗಿ, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳುವ ಜತೆಗೆ ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

‘ಮತದಾರರು ದೇಶದ ಅಳಿವು, ಉಳಿವಿನ ಬಗ್ಗೆ ಚಿಂತಿಸಿ, ನಮಗೆ ಯಾವ ಸರ್ಕಾರ ಬೇಕು ಎಂಬುದನ್ನು ನಿರ್ಧರಿಸಿ, ಮತ ಚಲಾಯಿಸುವ ಮೂಲಕ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ನಾವು ಮೊದಲು ಪ್ರಾಮಾಣಿಕರಾಗಿ ಉಳಿಯುವ ಜತೆಗೆ ಪ್ರಾಮಾಣಿಕರಿಗೆ ಮತ ಹಾಕಬೇಕು. ಆಗ ಮಾತ್ರ ದೇಶವನ್ನು ಸ್ವಚ್ಛವಾಗಿಡಲು ಸಾಧ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವ, ಘನತೆ ತರಲು ಸಾಧ್ಯ’ ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಮತದಾರರು ಪ್ರಜಾಪ್ರಭುತ್ವದ ಬುನಾದಿಯಾಗಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಬಹಳ ಮುಖ್ಯ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ತಮ್ಮ ಮತವನ್ನು ನಿರ್ಭೀತವಾಗಿ ನೈತಿಕವಾಗಿ ಚಲಾಯಿಸಿದಾಗ ಮಾತ್ರ ಉತ್ತಮ ಪ್ರಜಾಪ್ರಭುತ್ವದಡಿ ಸುಭದ್ರ ಸರ್ಕಾರ ರಚನೆ ಸಾಧ್ಯ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್ ಮಾತನಾಡಿ, ‘ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವವನ್ನು ಸಾರ್ವಜನಿಕರು ಅರಿಯಬೇಕು. ಜಿಲ್ಲೆಯಲ್ಲಿ ಸ್ವೀಪ್ ಸಮಿತಿಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಯುವ ಮತದಾರರು, ವಿದ್ಯಾರ್ಥಿಗಳು ಹಾಗೂ ಅಂಗವಿಕಲರನ್ನು ಹೊಸದಾಗಿ ಮತಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ ಜಾಗೃತಿ ಮೂಡಿಸಿದೆ’ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ದೇವರಾಜು ಮಾತನಾಡಿ, ‘ಪ್ರತಿವರ್ಷ ಭಾರತದಲ್ಲಿ ಲಕ್ಷಾಂತರ ಜನರು ಹೊಸದಾಗಿ ಮತದಾನದ ಹಕ್ಕನ್ನು ಪಡೆಯುತ್ತಾರೆ. ಅಂತಹ ಮತದಾರರಿಗೆ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸುವ ಅಗತ್ಯವಿದೆ. ಮತದಾನದಲ್ಲಿ ಹೆಚ್ಚು ಜನರು ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕಿದೆ’ ಎಂದರು.

ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದ ವತಿಯಿಂದ ಬಹುಮಾನ ಹಾಗೂ ಹೊಸ ಯುವ ಮತದಾರರಿಗೆ ಕಾರ್ಯಕ್ರಮದಲ್ಲಿ ಮತದಾನದ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ ಮತದಾನದ ಮಹತ್ವದ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ,  ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ನಾಗಪ್ರಶಾಂತ್ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು