ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮತದಾರರಲ್ಲಿ ಮತದಾನ ಜಾಗೃತಿ

ಪದ್ಮಶ್ರಿ ಪುರಸ್ಕೃತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಜಿಲ್ಲಾ ಸ್ವೀಪ್ ಸಮಿತಿ ಐಕಾನ್
Last Updated 3 ಮಾರ್ಚ್ 2023, 4:22 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘18 ವರ್ಷ ಮೀರಿದ ಯಾವುದೇ ವ್ಯಕ್ತಿ ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶ ಹಾಗೂ 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಕವಾಗಿರುವ ವಿವಿಧ ಚುನಾವಣಾ ನೋಡಲ್ ಅಧಿಕಾರಿಗಳ ತಂಡಗಳಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲಾಯಿತು.

ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ತಮಟೆ ವಾದ್ಯ ನುಡಿಸುವುದರಲ್ಲಿ ದೇಶ–ವಿದೇಶಗಳಲ್ಲಿ ಖ್ಯಾತಿ ಪಡೆದ ಜಿಲ್ಲೆಯವರೇ ಆದ ನಾಡೋಜ, ಪದ್ಮಶ್ರೀ ಪುರಸ್ಕೃತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರು ಜಿಲ್ಲಾ ಸ್ವೀಪ್ ಸಮಿತಿಯ ಜಿಲ್ಲಾ ಐಕಾನ್ ಆಗಿ ಘೋಷಿಸಲಾಗಿದೆ. ಇದು ಖುಷಿಯ ವಿಚಾರ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಮಾತನಾಡಿ, ‘ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಎಲ್ಲ ಅಧಿಕಾರಿಗಳು ಮತ್ತು ಗ್ರಾಮೀಣ ಭಾಗದಲ್ಲಿ ಪಿಡಿಒ ಹಾಗೂ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆಯ ಕಾರ್ಯಗಳನ್ನು ಚುರುಕುಗೊಳಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಮತದಾನ ಕುರಿತು ಹೆಚ್ಚು ಅರಿವು ಮೂಡಿಸಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ ಮಾತನಾಡಿ, ‘ಭಾರತ ಚುನಾವಣಾ ಆಯೋಗಕ್ಕೆ ಬದ್ಧರಾಗಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳಿಗೆ ಯಾವುದೇ ರೀತಿಯ ಮಾಹಿತಿ ಕೊರತೆ ಇರಬಾರದು ಎಂಬ ಉದ್ದೇಶದಿಂದ ವಿಶೇಷ ತರಬೇತಿ ನೀಡಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ನಿರ್ದಿಷ್ಟವಾದ ಚುನಾವಣೆ ಕಾರ್ಯಗಳನ್ನು ನಿರ್ದಿಷ್ಟ ಅವಧಿಯಲ್ಲಿ ನಿಖರವಾಗಿ ಮಾಡಬೇಕು ಎಂದು ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಬಗ್ಗೆ ರಾಜ್ಯ ಸಂಪನ್ಮೂಲ ವ್ಯಕ್ತಿ ಶಂಕರ ರೆಡ್ಡಿ ಹಾಗೂ ಚುನಾವಣಾ ವೆಚ್ಚಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಹರೀಶ್ ತರಬೇತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲೆಯ ಎಲ್ಲ ಚುನಾವಣಾಧಿಕಾರಿಗಳು, ಸ್ವೀಪ್ ಅಧಿಕಾರಿಗಳು, ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಚುನಾವಣಾ ಸಿಬ್ಬಂದಿ ಹಾಜರಿದ್ದರು.

ತಮಟೆ ಬಾರಿಸಿ ಅರಿವು

‘ನಿಮ್ಮ ಮತ ನಿಮ್ಮ ಹಕ್ಕು, ತಪ್ಪದೇ ನಿಮ್ಮ ಮತ ಚಲಾಯಿಸಿ’ ಎಂಬ ಘೋಷವಾಕ್ಯದೊಂದಿಗೆ ಪದ್ಮಶ್ರೀ, ನಾಡೋಜ ಮುನಿವೆಂಕಟಪ್ಪ ಅವರು ತಮಟೆ ಬಾರಿಸುವ ಮೂಲಕ ಮತದಾನದ ಮಹತ್ವದ ಕುರಿತು ಪ್ರಚಾರ ಮಾಡಿದರು. ನಂತರ ಇವರ ತಂಡ ತಮಟೆ ವಾದ್ಯವನ್ನು ನುಡಿಸುವ ಮೂಲಕ ಚುನಾವಣಾ ಜಾಗೃತಿಯನ್ನು ಪ್ರಾರಂಭಿಸಲಾಯಿತು.

ಮೈ ಭಾರತ್ ಹೂಂ’ ಚುನಾವಣಾ ಗೀತೆಯಯನ್ನು ಹಾಡಲಾಯಿತು.

ಸ್ವೀಪ್ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಇಎಲ್‌ಸಿ ನೋಡಲ್ ಅಧಿಕಾರಿ ಸತೀಶ್ ಕುಮಾರ್ ಪಿಪಿಟಿ ಮೂಲಕ ಜಿಲ್ಲೆಯ ಮತದಾರರಲ್ಲಿ ಮತದಾನದ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಹಮ್ಮಿಕೊಳ್ಳಲಾಗುವ ಸ್ವೀಪ್ ಚಟುವಟಿಕೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT